

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ದೇವನಹಳ್ಳಿ ಟೌನ್‌ನ ತಾಲೂಕು ಕಚೇರಿ ರಸ್ತೆಯ ಕೊರಮರ ಬೀದಿಯ ಭಜನಾ ಮಂದಿರ ಮುಂಭಾಗದಲ್ಲಿ ನುಲಿಯ ಚಂದಯ್ಯ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆ.11 ರಂದು ಬೆಳಗ್ಗೆ 9 ಗಂಟೆಗೆ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ತಿಳಿಸಿದರು.
ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನುಲಿಯ ಚಂದಯ್ಯ ಜಯಂತಿ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ನುಲಿಯ ಚಂದಯ್ಯ ಅವರು ವಚನಕಾರರಾಗಿ ಕನ್ನಡ ಸಾಹಿತ್ಯಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಶಿಷ್ಠಾಚಾರಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸಬೇಕು. ಅಂದು ಆವರಣದಲ್ಲಿ ಉಪಹಾರ ಮತ್ತು ಕುಡಿಯುವ ನೀರು ಸೇರಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಕಲಾ ಪ್ರದರ್ಶನ ನೀಡುವ ತಂಡಗಳನ್ನು ನಿಯೋಜಿಸುವಂತೆ ಹಾಗೂ ನುಲಿಯ ಚಂದಯ್ಯ ಅವರ ವಿಚಾರಧಾರೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಹಾಗೂ ವಚನ ಗಾಯನ ಸೇರಿ ಅಗತ್ಯ ವ್ಯವಸ್ಥೆ ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ, ಜನಪ್ರತಿನಿಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.