ಪೌಷ್ಟಿಕಾಂಶಗಳ ಕೊರತೆ ಆಗದಂತೆ ಎಚ್ಚರ ವಹಿಸಿ: ನ್ಯಾಯಾಧೀಶ ಪ್ರಸನ್ನಕುಮಾರ್ ಸಲಹೆ

hsd
Published on

ಹೊಸದುರ್ಗ: ಸಶಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಪೌಷ್ಟಿಕ ಆಹಾರ ಬಳಸಬೇಕು ಎಂದು ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಸನ್ನಕುಮಾರ್ ತಿಳಿಸಿದರು.

ತಾಲೂಕಿನ ಬೋಕಿಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬುಧವಾರ ತಾಲೂಕು ಕಾನೂನು ಸೇವಾ ಸಮಿತಿ ಆಯೋಜಿಸಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜನರಲ್ಲಿ ಪೌಷ್ಟಿಕ ಆಹಾರ ಹಾಗೂ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ಸೆಪ್ಟೆಂಬರ್ ತಿಂಗಳಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಆಚರಿಸುತ್ತದೆ. ಮಹಿಳೆಯರು ಮತ್ತು ಮಕ್ಕಳಲ್ಲಿ ಪೌಷ್ಟಿಕಾಂಶಗಳ ಕೊರತೆ ಆಗದಂತೆ ಎಚ್ಚರ ವಹಿಸುವ ಅಗತ್ಯವಿದೆ ಎಂದರು.

ಬಾಣಂತಿಯರಲ್ಲಿ ಅಪೌಷ್ಟಿಕತೆ ಉಂಟಾದರೆ ತಾಯಿ ಮತ್ತು ಮಗುವಿನ ಆರೋಗ್ಯದ ಮೇಲೆ ಮಾರಕ ಪರಿಣಾಮ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಅಂಗನವಾಡಿ ಮೂಲಕ ಮಕ್ಕಳು ಮತ್ತು ಮಹಿಳೆಯರಿಗೆ ಪೌಷ್ಟಿಕ ಆಹಾರ ಒದಗಿಸುವ ಕಾರ್ಯಕ್ರಮ ಜಾರಿಗೊಳಿಸಿದೆ ಎಂದು ಹೇಳಿದರು.

ಕಳೆದ 15 ವರ್ಷಗಳಿಂದ ಪೋಷಣ್ ಅಭಿಯಾನ ನಡೆಸುವ ಮೂಲಕ ಜನರಲ್ಲಿ ಪೌಷ್ಟಿಕ ಹಾಗೂ ಸಮತೋಲನ ಆಹಾರದ ಕುರಿತು ಜಾಗೃತಿ ಮೂಡಿಸಿದರೂ ಕೂಡ ಪ್ರಸ್ತುತ ದಿನಗಳಲ್ಲೂ ಅಪೌಷ್ಟಿಕತೆಯ ಪ್ರಕರಣಗಳನ್ನು ಕಾಣಬಹುದಾಗಿದೆ. ಸರ್ಕಾರದ ಸೌಲಭ್ಯ ಬಳಸಿಕೊಂಡು ಆರೋಗ್ಯ ಉತ್ತಮಪಡಿಸಿಕೊಳ್ಳುವಲ್ಲಿ ಪ್ರತಿಯೊಬ್ಬರು ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಪಿಡಿಒ ಜಯಣ್ಣ ಮಾತನಾಡಿ, ಆಧುನಿಕ ಹಾಗೂ ಬಾಯಿ ರುಚಿಯ ಆಹಾರ ಪದ್ಧತಿಯು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಸಾಂಪ್ರದಾಯಿಕ ಆಹಾರ ಪದ್ಧತಿ ಅನುಸರಿಸುವ ಮೂಲಕ ದೇಹಕ್ಕೆ ಅಗತ್ಯವಾಗಿರುವ ಪೌಷ್ಟಿಕಾಂಶ ನೀಡಿದರೆ ಉತ್ತಮ ಆರೋಗ್ಯ ಹೊಂದಬಹುದಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಸಲಹೆ ಸೂಚನೆ ಪಡೆದು ಪ್ರತಿಯೊಬ್ಬರು ಆರೋಗ್ಯ ರಕ್ಷಣೆ ಕಾರ್ಯಕ್ಕೆ ಮುಂದಾಗಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net