

ವಿಜಯವಾಣಿ ಸುದ್ದಿ ಜಾಲ ಚನ್ನರಾಯಪಟ್ಟಣ
ಮಕ್ಕಳಲ್ಲಿ ಅಪೌಷ್ಟಿಕತೆ ಕಂಡುಬಂದರೆ ಅನಾರೋಗ್ಯ ಉಂಟಾಗಲಿದೆ. ಹಾಗಾಗಿ ಮಕ್ಕಳ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲದು ಎಂದು ಚನ್ನಹಳ್ಳಿ ಗ್ರಾಪಂ ಅಧ್ಯಕ್ಷ ರಾಧಾಕೃಷ್ಣ ಹೇಳಿದರು.
ಹೋಬಳಿಯ ಪೋಲನಹಳ್ಳಿಯಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪೋಷಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರ್ಕಾರ ಈಗಾಗಲೇ ಶಾಲಾ ಮಕ್ಕಳಿಗೆ ಪೋಷಣ ಮಾಸಾಚರಣೆ ಮೂಲಕ ಮಕ್ಕಳಲ್ಲಿ ಅಪೌಷ್ಟಿಕತೆ ದೂರವಾಗಿಸಲು ಪೌಷ್ಟಿಕ ಆಹಾರ ನೀಡಲು ಮುಂದಾಗಿದ್ದು, ಹಾಲು, ವಾರಕ್ಕೊಂದು ಬಾರಿ ಮೊಟ್ಟೆ, ಚುಕ್ಕಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.
ಸಿಡಿಪಿ ಮಹೇಶ್ ಮಾತನಾಡಿ, ಸರ್ಕಾರ ಅಂಗನವಾಡಿ ಕೇಂದ್ರಗಳ ಮುಖಾಂತರ ಗರ್ಭಿಣಿ ಮಹಿಳೆಯರಿಗೆ ಪೌಷ್ಟಿಕ ಆಹಾರ ಕಿಟ್ ವಿತರಿಸಲಾಗುತ್ತಿದೆ. ಮಕ್ಕಳು ಪೌಷ್ಟಿಕವಾಗಿ ಬೆಳೆಯಬೇಕು ಎಂಬುದೇ ಸರ್ಕಾರದ ಉದ್ದೇಶವಾಗಿದೆ ಎಂದರು.
ಗ್ರಾಪಂ ಸದಸ್ಯರಾದ ಗೋಪಿನಾಥ್, ಶಿಲ್ಪಾ ಬೈರೇಗೌಡ, ಮೇಲ್ವಿಚಾರಕರಾದ ಮುನಿಲಕ್ಷ್ಮೀ, ಎಸ್‌ಡಿಎಂಸಿ ಅಧ್ಯಕ್ಷ ಮುನಿರಾಜ್, ಅಂಗನವಾಡಿ ಕಾರ್ಯಕರ್ತೆ ಯಶೋದಮ್ಮ, ಸರೋಜಮ್ಮ ಇತರರು ಇದ್ದರು.