

ಮಡಿಕೇರಿ: ಮಹಿಳೆಯೊಬ್ಬರು ನಮ್ಮ ವೈಯಕ್ತಿಕ ಫೇಸ್‌ಬುಕ್ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದ ಭಾವಚಿತ್ರಕ್ಕೆ ಅಶ್ಲೀಲ ಕಮೆಂಟ್ ಹಾಕಿದ್ದ ಆರೋಪಿಯನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ನಿವಾಸಿ ಗಂಗಧಾರ ಜಮಾದಾರಕನಿ(೨೨) ಬಂಧಿತ ಯುವಕ.
ಕೊಡವ ಸಮುದಾಯದ ಮಹಿಳೆಯೊಬ್ಬರು ತಮ್ಮ ಫೇಸ್‌ಬುಕ್‌ನಲ್ಲಿ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದ ಭಾವಚಿತ್ರಕ್ಕೆ ಬೆಳಗಾವಿ ಜಿಎಂಜಿ ಎಂಬ ಖಾತೆಯಿಂದ ಅಶ್ಲೀಲ ಕಮೆಂಟ್ ಹಾಕಿರುವ ಕುರಿತು ಮಡಿಕೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.
ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಯಾವುದೇ ರೀತಿಯ ಸಂದೇಶ/ಭಾವಚಿತ್ರ/ವಿಡಿಯೋಗಳನ್ನು ಹಂಚಿಕೊಳ್ಳುವ ಮುನ್ನ ಸತ್ಯ-ಅಸತ್ಯತೆಯನ್ನು ಪರಿಶೀಲಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಕೊಡಗು ಪೊಲೀಸರು ಕೋರಿದ್ದಾರೆ. ಕೊಡಗು ಜಿಲ್ಲಾ ಪೊಲೀಸರು ಸಾಮಾಜಿಕ ಜಾಲತಾಣಗಳ ಮೇಲೆ ಸಂಪೂರ್ಣ ನಿಗಾವಹಿಸಿದ್ದಾರೆ. ಕೋಮು ಸೌಹಾರ್ದತೆ ಕದಡುವ ದುರುದ್ದೇಶದಿಂದ ಸುಳ್ಳು ಸುದ್ದಿಯ ಪೋಸ್ಟ್‌ಗಳನ್ನು ಹರಿಬಿಟ್ಟು ಅಪಪ್ರಚಾರ ಮಾಡುವ ಮತ್ತು ಆತಂಕ ಸೃಷ್ಟಿಸುವ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಯಾವುದೇ ರೀತಿ ಅಕ್ರಮ ಚಟುವಟಿಕೆಗಳ ಕುರಿತು ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ ೧೧೨ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸಬೇಕು. ಅಲ್ಲದೇ, ಆಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.