

ಉಡುಪಿ: ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿದ ಅಪರಾಧಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ 9 ತಿಂಗಳು 10 ದಿನಗಳ ಶಿಕ್ಷೆ ಹಾಗೂ 2000 ರೂ. ದಂಡ ವಿಧಿಸಿದೆ.
ಬೆಳ್ಳಂಪಳ್ಳಿ ಗ್ರಾಮದ ಕಂಬ್ಲ ಮಜಲು ಪುಣ್ವೂರು ನಿವಾಸಿ ಸುರೇಂದ್ರ ಪತ್ನಿಗೆ ಕೋವಿಡ್ ಸಂದರ್ಭದಲ್ಲಿ ಕೊರೋನಾ ಪಾಸಿಟಿವ್ ಬಂದಿತ್ತು. ಆಕೆಯ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಗಂಟಲು ದ್ರವ ಪರೀಕ್ಷೆ ನಡೆಸಲು ಮನೆಗೆ ಬಂದ ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿ, ವಾಹನವನ್ನು ಹಾನಿಗೊಳಿಸಿ, ನಷ್ಟವನ್ನುಂಟು ಮಾಡಿರುವ ಹಿನ್ನೆಲೆಯಲ್ಲಿ ಸುರೇಂದ್ರ ಅವರ ವಿರುದ್ಧ ಹಿರಿಯಡ್ಕ ಪೊಲೀಸ್ ಠಾಣೆಯ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಆಪರಾಧಿಗೆ ಜೈಲು ಶಿೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ವಾದ ಮಂಡಿಸಿದ್ದಾರೆ.