

ಯಾದಗಿರಿ: ಜಿಲ್ಲೆಯಲ್ಲಿ ಬೇಸಿಗೆ ಪ್ರಮಾಣ ದಿನೇದಿನೆ ಹೆಚ್ಚಾಗತೊಡಗಿದ್ದು, ಎಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ (ಡಿಡಿಎಂಎ)ದ ಸಭೆ ನಡೆಸಿದ ಅವರು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುಬಹುದು. ಹೀಗಾಗಿ ಈಗಿನಿಂದಲೇ ಅಗತ್ಯ ತಯಾರಿ ಮಾಡಿಕೊಳ್ಳಬೇಕು. ನೆರೆ ರಾಜ್ಯ ತೆಲಂಗಾಣದಲ್ಲಿ ಕರೊನಾ ವೈರಸ್ ಪತ್ತೆಯಾಗಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ವೈರಸ್ ಹರಡದಂತೆ ಎಚ್ಚರ ವಹಿಸಬೇಕು ಎಂದರು.
ನಗರಸಭೆ ಕಸ ತುಂಬುವ ವಾಹನಗಳ ಮೈಕ್ ಮುಖಾಂತರ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಬೇಕು. ಜಿಲ್ಲೆಯ ಅಂಗನವಾಡಿಗಳಲ್ಲಿ ಮಕ್ಕಳಿಗಾಗಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಪ್ರತಿಯೊಂದು ಬಸ್ ನಿಲ್ದಾಣದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಬೇಸಿಗೆ ಹೆಚ್ಚಿದಂತೆ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆ ಆಗುತ್ತದೆ. ಹೀಗಾಗಿ ಜಾನುವಾರುಗಳಿಗೆ ಕುಡಿಯಲು ತೊಂದರೆ ಆಗಲಿದ್ದು, ಎಲ್ಲ ಕೆರೆಗಳಿಗೆ ನೀರು ತುಂಬಿಸಬೇಕು. ಜತೆಗೆ ಜಾನುವಾರುಗಳ ಆರೋಗ್ಯ ದೃಷ್ಟಿಯಿಂದ ಔಷಧ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಬೇಸಿಗೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ನಿಮ್ಮ ಕೆಳಹಂತದ ಅಧಿಕಾರಿಗಳ ಜತೆ ಟಾಸ್ಕ್ಪೋರ್ಸ್ ಸಭೆ ಕರೆಯಬೇಕು. ಅಲ್ಲದೆ ಹೊಸ ವಾಟ್ಸ್ಆ್ಯಪ್ ಗ್ರೂಪ್ ರಚಿಸಿ ದಿನನಿತ್ಯದ ಕಾರ್ಯಕ್ರಮಗಳ ವರದಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.
ಜಿಪಂ ಸಿಇಒ ಶಿಲ್ಪಾ ಶರ್ಮಾ, ಎಸ್ಪಿ ಋಷಿಕೇಶ ಭಗವಾನ್ ಸೋನಾವಣೆ, ಅಪರ ಡಿಸಿ ಪ್ರಕಾಶ ಜಿ.ರಜಪೂತ, ಎಸಿ ಶಂಕರಗೌಡ ಎಸ್.ಸೋಮನಾಳ ಇತರರಿದ್ದರು.