

ನಂಜನಗೂಡು: ತಾಲೂಕು ಮಟ್ಟದ ಅಧಿಕಾರಿಗಳು ಸರಿಯಾದ ಮಾಹಿತಿಯೊಂದಿಗೆ ಸಭೆಗೆ ಬರಬೇಕು ಎಂದು ಶಾಸಕ ದರ್ಶನ್ ದ್ರುವ ನಾರಾಯಣ್ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ನಗರದ ತಾಲೂಕು ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖೆಗಳ ಪಗತಿ ಕುರಿತ ಪೂರ್ಣ ವರದಿ ನೀಡದ ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರದಿಂದ ತಾಲೂಕಿನ ಅಭಿವೃದ್ಧಿಗೆ ನೂರಾರು ಕೋಟಿ ರೂ. ಹಣ ಬಿಡುಗಡೆಯಾಗುತ್ತಿದೆ. ಅಧಿಕಾರಿಗಳು ಜಾಗೃತಿಯಿಂದ ಕಾರ್ಯ ನಿರ್ವಹಿಸಿ. ಇನ್ನಷ್ಟು ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು. ಇಲಾಖೆಗಳಲ್ಲಿ ನಡೆದಿರುವ ಪ್ರಗತಿಯ ವರದಿ ಅಧಿಕಾರಿಗಳ ಬಳಿ ಕೇಳಿ ಮಾಹಿತಿ ಪಡೆದುಕೊಂಡರು.
ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕ ಸ್ಮಶಾನ, ಕೆರೆ-ಕಟ್ಟೆ, ಮತ್ತು ರೈತರು ತಿರುಗಾಡುವ ಜಮೀನಿಗಿರುವ ರಸ್ತೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು. ಒತ್ತುವರಿ ಆಗಿರುವ ಕೆರೆ ಮತ್ತು ರಸ್ತೆಯನ್ನು ಕೂಡಲೇ ತೆರವುಗೊಳಿಸಬೇಕು. ನ್ಯಾಯಾಲಯಗಳಲ್ಲಿರುವ ಪ್ರಕರಣಗಳನ್ನು ಮುಂದೂಡದೆ ಇತ್ಯರ್ಥಪಡಿಸಬೇಕು. ಕಂದಾಯ ಇಲಾಖೆಗೆ ಸಾರ್ವಜನಿಕರು ಆಗಮಿಸಿದಾಗ ವಿಳಂಬ ಮಾಡದೆ ವೇಗವಾಗಿ ಕೆಲಸ ಕಾರ್ಯಗಳು ಮಾಡಿಕೊಡಬೇಕು ಎಂದು ತಹಸೀಲ್ದಾರ್‌ಗೆ ನಿರ್ದೇಶನ ನೀಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು. ಹಳ್ಳಿಗಳಿಗೆ ಮದ್ಯ ಸರಬರಾಜು ಮಾಡುವ ಬಾರ್ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ಮದ್ಯ ಅಕ್ರಮ ಮಾರಾಟ ತಡೆಯಲು ಸಾಧ್ಯ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಎಗ್ಗಿಲ್ಲದೆ ಅಕ್ರಮ ಮಣ್ಣು ಮಾರಾಟದ ದಂಧೆ ನಡೆಯುತ್ತಿದೆ. ಹಾಗಾಗಿ ಅಧಿಕಾರಿಗಳು ಪ್ರಕರಣ ದಾಖಲಿಸಿಲ್ಲ ಕ್ರಮಕ್ಕೆ ಮುಂದಾಗಿಲ್ಲ ಎಂದು ನೀರಾವರಿ ಇಲಾಖೆ ಇಂಜಿನಿಯರ್‌ಗೆ ಪ್ರಕರಣ ದಾಖಲಿಸಬೇಕು ಎಂದು ತಿಳಿಸಿದರು.
ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳು ಕಂಡು ಬಂದಿದೆ. ಜಲಜೀವನ್ ಮಿಷನ್ ಎಂಬ ಯೋಜನೆಯ ಬಗ್ಗೆ ಮಾತನಾಡಲು ಸಾಧ್ಯವಾಗದಂತಹ ಮಟ್ಟಕ್ಕೆ ಸಮಸ್ಯೆಗಳಾಗಿ ಮಾರ್ಪಾಡಾಗಿದೆ. 2017ರಲ್ಲಿ ಪ್ರಾರಂಭವಾದ ಕೆರೆಗೆ ನೀರು ತುಂಬಿಸುವ ಯೋಜನೆ ಕಾಮಗಾರಿ ಇನ್ನು ಕೂಡ ಮುಗಿದಿಲ್ಲ. ಒಂದು ತಿಂಗಳ ಒಳಗಾಗಿ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸಂದೇಶ ನೀಡಿದರು.
ನಂಜುಂಡೇಶ್ವರನ ಬೆಳ್ಳಿರಥ ಯೋಜನೆಯನ್ನು ಯಾವಾಗ ಕಲ್ಪಿಸಿ ಕೊಡುತ್ತೀರಿ? ಇನ್ನೆಷ್ಟು ತಿಂಗಳು ಬೇಕು ನಿಮಗೆ ಎಂದು ದೇವಾಲಯದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ದೊಡ್ಡ ಜಾತ್ರೆ ಆಗಿರುವ ದಿನಾಂಕವನ್ನೇ ನೆನಪಿನಲ್ಲಿಟ್ಟುಕೊಳ್ಳದೆ ತಬ್ಬಿಬಾದ ಅಧಿಕಾರಿಗಳು ಪ್ರಗತಿ ಪರಿಶೀಲನಾ ಸಭೆಯಲ್ಲಿ ನಗೆ ಪಾಟಲಿಗೀಡಾದರು.
ಇನ್ನು ಅನೇಕ ಇಲಾಖೆಯ ಪ್ರಗತಿ ವರದಿಗಳನ್ನು ಪರಿಶೀಲಿಸಿ ತಾಲೂಕು ಮಟ್ಟದ ಅಧಿಕಾರಿಗಳು ಜಾಗೃತಿ ಮತ್ತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಅಧಿಕಾರಿಗಳಿಗೆ ಎಚ್ಚರಿಸಿದರು.
ಕೆಡಿಪಿ ಸಭೆಯಲ್ಲಿ ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಜೆರಾಲ್ಡ್ ರಾಜೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕೆ.ಮಾರುತಿ, ನಗರಸಭಾ ಅಧ್ಯಕ್ಷ ಶ್ರೀಕಂಠ, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಹಗಿನವಾಳು ಚೆನ್ನಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.