ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸದ ಅಧಿಕಾರಿ ವರ್ಗ

oppo_2
ಬೆಸಗರಹಳ್ಳಿ ವಿದ್ಯುತ್ ಶಾಖಾ ಕಚೇರಿಗೆ ರೈತ ಸಂಘದ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಗುಡಿದೊಡ್ಡಿ ಶಿವಲಿಂಗಯ್ಯ, ವಿ.ಸಿ.ಉಮಾಶಂಕರ್, ಅಣ್ಣೂರು ಮಹೇಂದ್ರ, ಕೀಳಘಟ್ಟ ನಂಜುಂಡಯ್ಯ, ಕೆ.ರಾಮಲಿಂಗೇಗೌಡ, ಕೀಲಾರ ಸೋಮಣ್ಣ, ಕೆ.ಜಿ.ಉಮೇಶ್ ಇದ್ದರು.
Published on

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಗ್ರಾಮದ ಸೆಸ್ಕ್ ಸಹಾಯಕ ಇಂಜಿನಿಯರ್ ಸಂತೋಷ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಅಧಿಕಾರಿಗಳು ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಗಳವಾರ ಬೆಸಗರಹಳ್ಳಿ ವಿದ್ಯುತ್ ಶಾಖಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸೆಸ್ಕ್ ಕಚೇರಿ ಮುಂದೆ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೇಷ್ಮೆ ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಗುಡಿದೊಡ್ಡಿ ಶಿವಲಿಂಗಯ್ಯ ಮಾತನಾಡಿ, ಬೆಸಗರಹಳ್ಳಿ ವಿದ್ಯುತ್ ಶಾಖಾ ಕಚೇರಿಯ ಹಿರಿಯ ಸಹಾಯಕ ಇಂಜಿನಿಯರ್ ಸಂತೋಷ್ ಅವರು 14 ವರ್ಷಗಳಿಂದ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಹಲವು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಅಲ್ಲದೆ ರೈತರೊಂದಿಗೆ ಸೌಜನ್ಯಯುತವಾಗಿ ವರ್ತಿಸದೆ ಉಡಾಫೆಯಿಂದ ವರ್ತಿಸುತ್ತಾರೆ ಎಂದು ಆರೋಪಿಸಿದರು.

ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಮಾತನಾಡಿ, ಒಂದೇ ಸ್ಥಳದಲ್ಲಿ 14 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸೆಸ್ಕ್ ಸಹಾಯಕ ಇಂಜಿನಿಯರ್ ಸಂತೋಷ್ ಅವರನ್ನು ಈ ಕೂಡಲೇ ಬೇರೆ ಕಡೆಗೆ ವರ್ಗಾವಣೆ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಸೆಸ್ಕ್ ಕಾರ್ಯಪಾಲಕ ಇಂಜಿನಿಯರ್ ಮೋಹನ್ ಆಗಮಿಸಿ, ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಮಾತನಾಡಿ, ಮನವಿಯನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಈ ಸಂಬಂಧ ಪರಿಶೀಲಿಸಿ ಕ್ರಮಕೈಗೊಳ್ಳಲಿದ್ದಾರೆಂದು ಎಂದು ತಿಳಿಸಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ರೈತ ಸಂಘದ ಕಾರ್ಯಕರ್ತರು ಪ್ರತಿಭಟನಾ ಸ್ಥಳದಲ್ಲಿ ಅಡುಗೆ ಮಾಡಿ ಊಟ ಮಾಡಿದರು. ರೈತ ಸಂಘದ ಮುಖಂಡರಾದ ಅಣ್ಣೂರು ಮಹೇಂದ್ರ, ಕೀಳಘಟ್ಟ ನಂಜುಂಡಯ್ಯ, ಕೆ.ರಾಮಲಿಂಗೇಗೌಡ, ಕೀಲಾರ ಸೋಮಣ್ಣ, ಕೆ.ಜಿ.ಉಮೇಶ್, ಲಿಂಗರಾಜು, ಅರಗಿನಮೇಲೆ ರಾಮೇಗೌಡ, ಸೊಳ್ಳೆಪುರ ದಯಾನಂದ್, ಪ್ರಭುಲಿಂಗ, ಪಣ್ಣೆದೊಡ್ಡಿ ವೆಂಕಟೇಶ, ರಮೇಶ್, ಶಿವಾರ ರಾಮಕೃಷ್ಣಪ್ಪ, ರಾಮಸ್ವಾಮಿ, ಡಿ.ಎ.ಕೆರೆ ರಮೇಶ್, ಉಮೇಶ್, ಡಿ.ಕೆ.ಚಂದ್ರ, ಕುಮಾರ, ಅಶ್ವಥ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net