

ವಿಜಯವಾಣಿ ಸುದ್ದಿಜಾಲ ಧಾರವಾಡ
ಸೂಕ್ತ ನಿರ್ದೇಶನ ನೀಡಿದರೂ ಕೆಲ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳಲ್ಲಿ ವಿಳಂಬ, ನಿಷ್ಕಾಳಜಿ ಕಾಣುತ್ತಿದೆ. ಇದರಿಂದ ಆಗುವ ರಸ್ತೆ ಅಪಘಾತ, ಜೀವ ಹಾನಿಗಳಿಗೆ ಕಾಮಗಾರಿ ವ್ಯಾಪ್ತಿಯ ಸಂಬಂಧಿತ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಅಧ್ಯಕ್ಷೆ ದಿವ್ಯ ಪ್ರಭು ಎಚ್ಚರಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅವಳಿನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಸಭೆಯಲ್ಲಿ ನೀಡಲಾಗುವ ಸೂಚನೆ, ಸಲಹೆ ಪಾಲಿಸಬೇಕು. ಹುಬ್ಬಳ್ಳಿ ಗಬ್ಬೂರ ಕ್ರಾಸ್ದಿಂದ ಧಾರವಾಡದ ನರೇಂದ್ರ ಬೈಪಾಸ್ ರಸ್ತೆ ಅಗಲೀಕರಣ ಕಾಮಗಾರಿ ವಿಳಂಬವಾಗುತ್ತಿದೆ. ಅದನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತ ಅವಕಾಶ ನೀಡಬೇಕು ಎಂದರು.
ಬೈಪಾಸ್ನಲ್ಲಿ ಅಪಘಾತಗಳು ಆಗದಂತೆ ಎಚ್ಚರ ವಹಿಸಿ. ರಸ್ತೆ ಪಕ್ಕದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾ, ಮಾರ್ಗಸೂಚಿ ಫಲಕ ಮತ್ತು ಎಚ್ಚರಿಕೆ ಸಂದೇಶಗಳನ್ನು ಜನರಿಗೆ ಕಾಣುವಂತೆ ಪ್ರದರ್ಶಿಸಬೇಕು ಎಂದರು.
ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾತನಾಡಿ, ಮಹಾನಗರ ವ್ಯಾಪ್ತಿಯ ಸಂಭವನೀಯ ಅಪಘಾತ ಸ್ಥಳಗಳನ್ನು ಗುರುತಿಸುವ ಕುರಿತು ಸಮೀಕ್ಷೆ ಮಾಡಿ, ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಲಾಗುತ್ತದೆ. ಈ ಕುರಿತು ಅಭಿವೃದ್ಧಿ ಕ್ರಮ ಜರುಗಿಸಬೇಕು. ಹುಬ್ಬಳ್ಳಿಯಲ್ಲಿ ಮೇಲ್ಸೇತುವೆ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಲು ಲೋಕೋಪಯೋಗಿ ಇಲಾಖೆ ಮುತುವರ್ಜಿ ವಹಿಸಬೇಕು. ಕಾಮಗಾರಿ ವಿಳಂಬದಿಂದ ಜನರ ಜೀವಕ್ಕೆ ಅಪಾಯವಾದರೆ ಸಂಬಂಧಿಸಿದವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ್ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಸಿ.ಆರ್. ರವೀಶ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪ್ರಶಾಂತ ಪಾಟೀಲ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ. ದಾಮೋದರ, ನೂರ ಮಹಮ್ಮದ ಬಾಷಾ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮಹಾನಗರ ಪಾಲಿಕೆ, ಇತರ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.