

ಬೆಳಗಾವಿ: ಜಿಲ್ಲೆಯಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲ ಇಲಾಖೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಒಂದು ವೇಳೆ ಅಂತಹ ಘಟನೆಗಳು ಸಂಭವಿಸಿದಲ್ಲಿ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಕೂಡಲೇ ಸ್ಪಂದಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಮಹಿಳಾ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಂದು ವರ್ಷದಲ್ಲಿ ಹೆಣ್ಣು ಮಕ್ಕಳು ಕಾಣೆ, ವರದಕ್ಷಿಣೆ ಕಿರುಕುಳ, ದೌರ್ಜನ್ಯ, ಮಹಿಳೆಯರ ಕೊಲೆ ಪ್ರಕರಣಗಳು ಬಹಳಷ್ಟು ದಾಖಲಾಗಿವೆ. ಅಂತಹ ಪ್ರಕರಣಗಳನ್ನು ಕೂಡಲೇ ಕೈಗೆತ್ತಿಕೊಂಡು ನೊಂದ ಮಹಿಳೆಯರಿಗೆ, ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕು ಎಂದರು.
ವರದಿ ಸಲ್ಲಿಸಲಿ:
ಜಿಲ್ಲೆಯಲ್ಲಿ 6 ತಿಂಗಳಲ್ಲಿ 9 ಮಹಿಳೆಯರ ಕೊಲೆ ಪ್ರಕರಣಗಳು ದಾಖಲಾಗಿವೆ. ಪೊಲೀಸ್ ಇಲಾಖೆ ತಕ್ಷಣ ಸ್ಪಂದಿಸಿ ಕ್ರಮ ಕೈಗೊಳ್ಳಬೇಕು ಎಂದರು. ಸವದತ್ತಿ ತಾಲೂಕಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ದೂರುಗಳು ಕೇಳಿ ಬಂದಿವೆ. ತಾಲೂಕಿನ ವಿವಿಧ ಇಲಾಖೆಯಿಂದ ಮಹಿಳೆಯರ ರಕ್ಷಣೆಗೆ ಸಂಬಂಧಿಸಿದ ವರದಿ ಕೂಡಲೇ ಸಲ್ಲಿಸಬೇಕು ಎಂದು ತಿಳಿಸಿದರು.
ಜಾಗೃತಿ ನಡೆಯಲಿ:
ಜಿಲ್ಲೆಯಲ್ಲಿ ಆಸ್ತಿ ವಿಚಾರವಾಗಿ ತಾಯಿಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ದಾಖಲಾಗಿದೆ. ಕೆಲ ತಿಂಗಳಿಂದ ಮಹಿಳೆಯರ ನಾಪತ್ತೆ ಪ್ರಕರಣಗಳು ದಾಖಲಾಗಿವೆ. ಜಿಲ್ಲಾಡಳಿತದಿಂದ ಮಹಿಳೆಯರ ರಕ್ಷಣೆ, ಕಾನೂನು ಅರಿವು ಸೇರಿ ಹೆಚ್ಚು ಜಾಗೃತಿ ಕಾರ್ಯಕ್ರಮ ಯೋಜನೆಗೆ ಮುಂದಾಗಬೇಕು ಎಂದು ತಿಳಿಸಿದರು.
ಡೊಂಬರ ಕಾಲನಿಗೆ ಭೇಟಿ:
ನಗರದ ಡೊಂಬರ ಕಾಲನಿಯಲ್ಲಿ ಸಾಕಷ್ಟು ಮಹಿಳೆಯರಿಗೆ ಪಡಿತರ ಚೀಟಿ, ಶೌಚಗೃಹ, ರಸ್ತೆ, ವೃದ್ಧಾಪ್ಯ ವೇತನ, ಅಂಗವಿಕಲ ಮಹಿಳೆಯರಿಗೆ ದ್ವಿಚಕ್ರ ವಾಹನ ವ್ಯವಸ್ಥೆ ಇಲ್ಲದೆ ಪರಡುತ್ತಿದ್ದಾರೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಡೊಂಬರ ಕಾಲನಿಗೆ ಭೇಟಿ ನೀಡಿ ಮೂಲ ಸೌಕರ್ಯ ಒದಗಿಸಬೇಕು.
ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯನ್ನು ಸಭೆಯಲ್ಲಿಯೇ ದೂರವಾಣಿ ಮೂಲಕ ಸಂಪರ್ಕಿಸಿದ ಅವರು, ಪೊಲೀಸ್ ಹಾಗೂ ಇತರ ಇಲಾಖೆಗಳಿಂದ ಯಾವ ರೀತಿ ನೆರವು ದೊರಕಿದೆ ಎಂದು ವಿಚಾರಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, ಜಿಲ್ಲೆಯಲ್ಲಿ ಶಾಲೆ-ಕಾಲೇಜು, ಪಿಜಿ ಸೆಂಟರ್‌ಗಳಲ್ಲಿ ಶೌಚಗೃಹ, ಕುಡಿಯುವ ನೀರು, ಬಸ್ ಸೌಲಭ್ಯ ಸೇರಿ ಅಗತ್ಯ ಮೂಲ ಸೌಕರ್ಯ ಕಡ್ಡಾಯವಾಗಿ ಒದಗಿಸಲು ಈಗಾಗಲೇ ಸೂಚಿಸಲಾಗಿದೆ. ಅದೇ ರೀತಿ ಮಹಿಳಾ ಸಹಾಯವಾಣಿ ಜಾಗೃತಿ ಕಾರ್ಯಕ್ರಮ ಮೂಡಿಸಲಾಗುತ್ತಿದೆ. ಗ್ರಾಪಂ ಮಟ್ಟದಲ್ಲಿ ಪೊಲೀಸ್, ಕಂದಾಯ ಇಲಾಖೆಯಿಂದ ಜಂಟಿಯಾಗಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಸೂಚಿಲಾಗಿದೆ ಎಂದು ಮಾಹಿತಿ ನೀಡಿದರು.
ಜಿಪಂ ಸಿಇಒ ರಾಹುಲ್ ಶಿಂಧೆ ಮಾತನಾಡಿ, ಗ್ರಾಪಂ ಮಟ್ಟದಲ್ಲಿ ಶಾಲೆಗಳಲ್ಲಿ ಪ್ರತಿ ನಾಲ್ಕನೇ ಶನಿವಾರ ಈಗಾಗಲೇ ಕಾರ್ಯಕ್ರಮ ಆಯೋಜನೆ ಮೂಲಕ ಜಾಗೃತಿ ಮೂಡಿಸಲಾಗುತ್ತದೆ. ಅಂತಹ ಯಾವುದೇ ರೀತಿ ಘಟನೆಗಳು ಕಂಡುಬಂದರೆ ಕೂಡಲೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಮುರಳಿಮೋಹನ್ ರೆಡ್ಡಿ, ಐಎಎಸ್ ಪ್ರೊಬೇಷನರಿ ಅಧಿಕಾರಿ ದಿನೇಶಕುಮಾರ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ.ಬಸರಗಿ ಇತರರಿದ್ದರು.