ಅಧಿಕಾರಿಗಳು ಅಗತ್ಯ ಮಾಹಿತಿ ಒದಗಿಸಿ: ಡಿಸಿ ಸೂಚನೆ

7adarshkdga5
Published on

ಮಡಿಕೇರಿ: ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳು ಜಂಟಿಯಾಗಿ ತಮ್ಮ ವ್ಯಾಪ್ತಿಯ ಮತಗಟ್ಟೆ ಪ್ರದೇಶ ಗ್ರಾಮಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದರು.


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿಧಾನಸಭಾ ಚುನಾವಣೆ ಸಂಬಂಧ ಶನಿವಾರ ಆಯೋಜಿಸಿದ್ದ ಸೆಕ್ಟರ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಈಗಾಗಲೇ ವಿಧಾನಸಭಾ ಚುನಾವಣೆ ಸಿದ್ಧತೆಗಳು ನಡೆದಿದೆ. ಚುನಾವಣಾ ಆಯೋಗದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳು ಇದೆಯೇ ಎಂಬುದನ್ನು ಖಾತರಿಪಡಿಸಿಕೊಂಡು ಮಾಹಿತಿ ಒದಗಿಸಬೇಕು. ಸೆಕ್ಟರ್ ಅಧಿಕಾರಿಗಳು ಮತ್ತು ಪೊಲೀಸ್ ಸೆಕ್ಟರ್ ಅಧಿಕಾರಿಗಳು ಮತಗಟ್ಟೆ ಪ್ರದೇಶ ಗ್ರಾಮಗಳಿಗೆ ಭೇಟಿ ನೀಡಿ ಅಗತ್ಯ ಮಾಹಿತಿ ಒದಗಿಸುವಂತೆ ಸೂಚಿಸಿದರು.


ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಎಲ್ಲಾ ಮತಗಟ್ಟೆಗಳಿಗೆ ತೆರಳಿ ಶೌಚಾಲಯ, ಕುಡಿಯುವ ನೀರು, ಪೀಠೋಪಕರಣ, ರ‌್ಯಾಂಪ್‌ಹಾಗೂ ವಿದ್ಯುತ್ ವ್ಯವಸ್ಥೆ ಇತರೆ ಸೌಕರ್ಯಗಳು ಇದೆಯೇ ಎಂಬುದನ್ನು ಪರಿಶೀಲಿಸಿ ವರದಿ ನೀಡಬೇಕು. ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ಸೂಕ್ಷ್ಮ ಪ್ರದೇಶಗಳ ಬಗ್ಗೆ ವರದಿ ನೀಡಬೇಕು. ಈ ಹಿಂದೆ ಯಾವುದಾದರೂ ಪ್ರಕರಣಗಳು ದಾಖಲಾಗಿದ್ದಲ್ಲಿ ಮಾಹಿತಿ ಒದಗಿಸುವುದು. ವಲ್ನರಬಲ್ ಸಂಬಂಧಿಸಿದಂತೆ ತಮ್ಮ ಮತಗಟ್ಟೆ ಬಗ್ಗೆ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಹೇಳಿದರು.


ಪ್ರತಿಯೊಂದು ಚುನಾವಣೆಯಲ್ಲಿ ಹೊಸ ಹೊಸ ವಿಷಯ ಕಲಿಯುವುದು ಇರುತ್ತದೆ. ಆದ್ದರಿಂದ ಚುನಾವಣಾ ವಿಷಯದಲ್ಲಿ ಉದಾಸೀನ ಮಾಡದೆ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.


ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಮಾತನಾಡಿ, ಈಗಾಗಲೇ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಸೆಕ್ಟರ್ ಹಾಗೂ ಪೊಲೀಸ್ ಸೆಕ್ಟರ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ತಮ್ಮ ತಮ್ಮ ವ್ಯಾಪ್ತಿಯ ವಲ್ನರಬಲ್ ಹಾಗೂ ಮತಗಟ್ಟೆಗಳಲ್ಲಿನ ಸೌಲಭ್ಯ ಸಂಬಂಧಿಸಿದಂತೆ ಕೂಡಲೇ ಮಾಹಿತಿ ಒದಗಿಸುವಂತೆ ತಿಳಿಸಿದರು.


ಸಭೆಯಲ್ಲಿ ಚುನಾವಣಾಧಿಕಾರಿಗಳಾದ ಯತೀಶ್ ಉಳ್ಳಾಲ್(ಮಡಿಕೇರಿ ವಿಧಾನಸಭಾ ಕ್ಷೇತ್ರ), ಶಬಾನಾ ಎಂ.ಷೇಕ್(ವಿರಾಜಪೇಟೆ ವಿಧಾನಸಭಾ ಕ್ಷೇತ್ರ), ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ತಹಶೀಲ್ದಾರರಾದ ಅರ್ಚನಾ ಭಟ್, ಸೆಕ್ಟರ್ ಅಧಿಕಾರಿಗಳು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net