ಹಳ್ಳಿಗಳ ಸ್ವಚ್ಛತೆ ಅಧಿಕಾರಿಗಳು ಶ್ರಮಿಸಬೇಕು

33
Published on

ಮೈಸೂರು: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವೈಜ್ಞಾನಿಕವಾಗಿ ಘನ ತ್ಯಾಜ್ಯ ನಿರ್ವಹಣೆಗೆ ಹೆಚ್ಚು ಒತ್ತು ನೀಡುವ ಮೂಲಕ ಹಳ್ಳಿಗಳು ಸ್ವಚ್ಛ ಹಾಗೂ ಸುಂದರವಾಗಿರುವಂತೆ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಮತ್ತು ಜಲ್ ಜೀವನ್ ಮಿಷನ್ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.


ಸ್ವಚ್ಛ ಭಾರತ ಮಿಷನ್ ಯೋಜನೆಯ ಆರಂಭದ ದಿನಗಳಲ್ಲಿ ಗ್ರಾಮೀಣ ಭಾಗದ ಪ್ರತಿ ಮನೆಗಳಲ್ಲಿ ಶೌಚಗೃಹ ನಿರ್ಮಾಣ ಪ್ರಮುಖ ಗುರಿಯಾಗಿತ್ತು, 2019ರ ವೇಳೆಗೆ ಈ ಗುರಿಯನ್ನು ಸಾಧಿಸಿದ್ದೇವೆ. ಈಗಲೂ ಕೆಲ ಗ್ರಾಮಗಳಲ್ಲಿ ಮನೆಯಲ್ಲಿ ಶೌಚಗೃಹವಿದ್ದರೂ ಬಹಿರ್ದೆಸೆಗೆ ಹೋಗುವ ಪುರುಷರು ಇದ್ದಾರೆ. ಅವರಿಗೆ ಅರಿವು ಮೂಡಿಸಿ ಶೌಚಗೃಹ ಉಪಯೋಗಿಸಲು ಮನವೊಲಿಸಬೇಕು ಎಂದು ತಿಳಿಸಿದರು.

ಪ್ರತಿಯೊಂದು ಹಳ್ಳಿಗಳು ನೈರ್ಮಲ್ಯದಿಂದ ಕೂಡಿರಬೇಕು. ಚರಂಡಿಗಳನ್ನು ವೈಜ್ಞಾನಿಕವಾಗಿ ನಿರ್ಮಿಸಿ ಇಂಗುಗುಂಡಿಯಲ್ಲಿ ತ್ಯಾಜ್ಯ ನೀರನ್ನು ಇಂಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ಸಭೆಗಳಲ್ಲಿ ಮೊದಲ ಅಜೆಂಡಾವಾಗಿ ಸ್ವಚ್ಛತೆಯನ್ನು ಪರಿಗಣಿಸಬೇಕು. ಕಸ ಸಂಗ್ರಹಣೆ, ವಿಂಗಡಣೆ, ಸ್ವಚ್ಛತಾ ವಾಹನಗಳ ಬಳಕೆ ಬಗ್ಗೆ ಗ್ರಾಮ ಪಂಚಾಯತಿ ಸದಸ್ಯರ ಜೊತೆ ಚರ್ಚಿಸಿ, ಸಮಸ್ಯೆ ಇದ್ದರೆ ಅದಕ್ಕೆ ಶೀಘ್ರವೇ ಪರಿಹಾರ ಕಂಡುಕೊಳ್ಳುಬೇಕು ಎಂದು ನಿರ್ದೇಶನ ನೀಡಿದರು.
ಸ್ವಚ್ಛ ಶನಿವಾರವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಆಚರಿಸಿ ಜನರಿಗೆ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕು. ಅನೈರ್ಮಲ್ಯವು ವೇಗವಾಗಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಅವರ ಶೈಕ್ಷಣಿಕ ಜೀವನಕ್ಕೆ ತೊಂದರೆಯಾಗುತ್ತದೆ. ಅಲ್ಲದೆ ಹಿರಿಯ ಜೀವಗಳ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.

ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣವು ಕಡ್ಡಾಯವಾಗಿ ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಮುಕ್ತಾಯಗೊಳ್ಳಬೇಕು. ಅಲ್ಲಿಯವರೆಗೆ ತಾತ್ಕಾಲಿಕ ಶೆಡ್‌ಗಳಲ್ಲಿ ಕಸ ಸಂಗ್ರಹಣೆ, ವಿಂಗಡಣೆ ಕಾರ್ಯ ನಿರಂತರವಾಗಿ ನಡೆಯಲು ಕ್ರಮ ಕೈಗೊಳ್ಳುವಂತೆ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ಕಾರ್ಯದರ್ಶಿ ಮಹೇಶ್, ಮೈಸೂರು ವಿಭಾಗ ಮಟ್ಟದ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಉಡುಪಿ ಜಿಲ್ಲೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ನೋಡಲ್ ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಕಾರ್ಯನಿರ್ವಾಹಕ ಅಧಿಕಾರಿಗಳು ಸಭೆ ಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net