ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಲಿ

New KDP 123
Published on

ಹುಬ್ಬಳ್ಳಿ : ಕಾಮಗಾರಿಗಳು ನಡೆಯುವ ಸ್ಥಳಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ಅಧಿಕಾರಿ ದೀಪಕ ಮಡಿವಾಳರ ಹೇಳಿದರು.

ಇಲ್ಲಿನ ತಾಲೂಕು ಆಡಳಿತ ಸೌಧದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಅವರು ಮಾತನಾಡಿದರು.

ಶಾಲೆಗಳಿಗೆ ಅಗತ್ಯ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಒಂದು ವೇಳೆ ಶಾಲೆಗಳು ಮೂಲ ಸೌಕರ್ಯಗಳಿಂದ ವಂಚಿತವಾಗಿದ್ದರೆ, ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಸೇರಿಸಿ, ದಾಖಲಾತಿ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಶಾಲಾ ಕೊಠಡಿಗಳು ಶಿಥಿಲವಾಗಿದ್ದರೆ ದುರಸ್ತಿ ಮಾಡಿಕೊಳ್ಳಬೇಕು. ನಿಮಾಣ ಹಂತದಲ್ಲಿರುವ ಶಾಲಾ ಕೊಠಡಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ರಸ್ತೆ ಬದಿಗಳಲ್ಲಿ ನೆಡುವ ಸಸಿಗಳಿಗೆ ಬೇಲಿ ಹಾಕಬೇಕು. ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಲ್ಲಿಕೆಯಾದ ಸಾರ್ವಜನಿಕರ ದೂರು, ಸಮಸ್ಯೆಗಳಿಗೆ ಅಧಿಕಾರಿಗಳು ಪರಿಹಾರ ಒದಗಿಸಲು ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಇಲಾಖೆಗಳ ಪ್ರಗತಿ ವರದಿ ವಾಚಿಸಿದರು.

ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ ಬೊಮ್ಮಕ್ಕನವರ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಚಂದ್ರಶೇಖರ ಕುರ್ತಕೋಟಿ, ವಲಯ ಅರಣ್ಯ ಅಧಿಕಾರಿ ಆರ್.ಎಸ್. ಉಪ್ಪಾರ, ಹಿಂದುಳಿದ ವರ್ಗಗಳ ತಾಲೂಕು ಕಲ್ಯಾಣಾಧಿಕಾರಿ ಸಿ.ವಿ. ಕರವೀರಮಠ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸಿ.ಆರ್. ಅಂಬಿಗೇರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net