

ಮಡಿಕೇರಿ: ಜಿಲ್ಲಾ ಮಟ್ಟದ ಅಧಿಕಾರಿಗಳು ಗಡಿ ಪ್ರದೇಶದ ಗ್ರಾಮಗಳಿಗೆ ತಿಂಗಳಿಗೊಮ್ಮೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡುವ ಮೂಲಕ ಸಾರ್ವಜನಿಕರ ಕುಂದುಕೊರತೆ ಆಲಿಸುವಂತಾಗಬೇಕು ಎಂದು ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ಸಭೆಯಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಬಿಡುಗಡೆಯಾಗಿರುವ ಅನುದಾನ, ಹಣ ಬಳಕೆ ಪ್ರಮಾಣ ಪತ್ರ ಹಾಗೂ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ಪಡೆದು ಮಾತನಾಡಿದರು.
ಗಡಿ ಪ್ರದೇಶದ ಗ್ರಾಮಗಳಲ್ಲಿ ಕನ್ನಡದ ಅಸ್ಮಿತೆಯನ್ನು ಹೆಚ್ಚಿಸುವಲ್ಲಿ ಅಗತ್ಯ ಕಾರ್ಯಕ್ರಮ ರೂಪಿಸಬೇಕು. ಗಡಿ ಭಾಗದ ಜನರಲ್ಲಿ ಕನ್ನಡ ಭಾಷೆ, ಸಂಸ್ಕೃತಿಯನ್ನು ಉತ್ತೇಜಿಸುವಲ್ಲಿ ಪ್ರಯತ್ನಗಳು ಮುಂದುವರೆಯಬೇಕು. ಜಿಲ್ಲೆಯ ಗಡಿ ಪ್ರದೇಶದಲ್ಲಿ ಕೊಡಗಿನ ಇತಿಹಾಸ, ದಾರ್ಶನಿಕರನ್ನು ಒಳಗೊಂಡ ಕಿರುಪುಸ್ತಕ ಪ್ರಕಟ, ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಅಗತ್ಯ ನೆರವು ನೀಡಲಾಗುವುದು ಎಂದು ತಿಳಿಸಿದರು.
’ರಾಜ್ಯದ ಗಡಿ ಭಾಗದ ಜನರ ಆರ್ಥಿಕ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಸ್ಥಿತಿಗತಿ ಬಗ್ಗೆ ಅಧ್ಯಯನ ಮಾಡುವ ನಿಟ್ಟಿನಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ. ರಾಜ್ಯದ ೧೯ ಜಿಲ್ಲೆಗಳ ೬೩ ತಾಲೂಕುಗಳ ಹಾಗೂ ೬ ರಾಜ್ಯಗಳ(ಕೇರಳ, ತಮಿಳುನಾಡು, ಆಂದ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ ಮತ್ತು ಗೋವಾ) ಗಡಿ ಪ್ರದೇಶವನ್ನು ಹೊಂದಿದ್ದು, ಗಡಿ ಭಾಗದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಮತ್ತಷ್ಟು ಪ್ರಯತ್ನಗಳು ನಡೆಯಬೇಕಿದೆ ಎಂದು ವಿವರಿಸಿದರು.
ರಾಜ್ಯದ ೯೯೮ ಗ್ರಾಮಗಳು ಗಡಿ ಪ್ರದೇಶದ ವ್ಯಾಪ್ತಿಯಲ್ಲಿ ಬರುತ್ತವೆ. ಈ ಪ್ರದೇಶದಲ್ಲಿ ಕನ್ನಡ ಅಸ್ಮಿತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಹಲವು ಸಾಂಸ್ಕೃತಿಕ, ಶೈಕ್ಷಣಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗಡಿ ಭಾಗದಲ್ಲಿ ಕನ್ನಡ ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳು ಇರುವಂತೆ ನೋಡಿಕೊಳ್ಳಬೇಕು. ಗ್ರಂಥಾಲಯ ಮತ್ತು ಪಠ್ಯಪುಸ್ತಕಗಳ ವಿತರಣೆ, ಶುದ್ಧ ಕುಡಿಯುವ ನೀರು ಘಟಕ ನಿರ್ಮಾಣ, ಕನ್ನಡ ಶಿಕ್ಷಕರ ನೇಮಕ ಬಗ್ಗೆ ಗಮನಹರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.
ಕೊಡಗು ಜಿಲ್ಲೆಯ ಗಡಿ ಪ್ರದೇಶಗಳಾದ ಕುಟ್ಟ, ಮಾಕುಟ್ಟ, ಕರಿಕೆ ಗಡಿ ಪ್ರದೇಶಗಳಲ್ಲಿ ಪ್ರವೇಶ ದ್ವಾರ ನಿರ್ಮಾಣ ಮಾಡಲು ಅಗತ್ಯ ಅನುದಾನ ನೀಡಲಾಗುವುದು. ಸಮಾಜ ಕಲ್ಯಾಣ ಹಾಗೂ ಗಿರಿಜನ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿ ನಿಲಯಗಳು, ವಸತಿ ಶಾಲೆಗಳ ಸ್ಥಿತಿಗತಿಯನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಡಾ.ಸಿ.ಸೋಮಶೇಖರ್ ಹೇಳಿದರು.
ಸ್ಮಾರ್ಟ್ ಕ್ಲಾಸ್‌ಗೆ ಹಣ ಒದಗಿಸಲಾಗುತ್ತಿದೆ. ಗಡಿ ಭಾಗದ ಗ್ರಾಮಗಳಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣ, ಗ್ರಾಮೀಣ ಭಾಗದಲ್ಲಿ ಕಲಾವಿದರಿಗೆ ಪ್ರೋತ್ಸಾಹಿಸುವುದು, ಗಡಿ ಭಾಗದಲ್ಲಿ ಯರವ ಭಾಷೆಯ ಜತೆ ಕನ್ನಡ ಭಾಷೆ ಕಲಿಸುವಂತಾಗಬೇಕು ಎಂದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ದಾರ್ಶನಿಕರು, ಸಂತರ ಸ್ಮಾರಕವನ್ನು ಅಭಿವೃದ್ಧಿ ಪಡಿಸುವುದರ ಜತೆಗೆ ಕಿರು ಪುಸ್ತಕ ಪ್ರಕಟಿಸುವಂತಾಗಬೇಕು. ಗಡಿ ಭಾಗದಲ್ಲಿ ಕನ್ನಡ ಶಾಲೆಗಳು ಸೊರಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಶಾಲೆಗಳಲ್ಲಿ ಗ್ರಂಥಾಲಯ, ಪೀಠೋಪಕರಣ, ಬಯಲು ರಂಗಮಂದಿರ ನಿರ್ಮಾಣ, ಸಾಂಸ್ಕೃತಿಕ ಭವನ ನಿರ್ಮಾಣ ಮಾಡುವುದು, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದು ಮತ್ತಿತರ ಕಾರ್ಯಗಳು ಆಗಬೇಕಿದೆ. ನಗರದಲ್ಲಿ ನಿರ್ಮಾಣ ಆಗುತ್ತಿರುವ ಸುವರ್ಣ ಸಮುಚ್ಚಯ ಭವನ ನಿರ್ಮಾಣ ಕಾಮಗಾರಿಯನ್ನು ಆದಷ್ಟು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮಾತನಾಡಿ, ಗಡಿ ಪ್ರದೇಶದ ಶಾಲೆಗಳಲ್ಲಿ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲಾಗಿದೆ. ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಿಸಲಾಗಿದೆ. ಬೀದಿ ದೀಪ ಅಳವಡಿಕೆ, ಶಾಲೆಗಳಲ್ಲಿ ತಡೆಗೋಡೆ ನಿರ್ಮಾಣ, ಹೀಗೆ ಗಡಿ ಪ್ರದೇಶದ ಶಾಲೆಗಳು, ಅಂಗನವಾಡಿಗಳ ಅಭಿವೃದ್ಧಿಗೆ ಕ್ರಮವಹಿಸಲಾಗಿದೆ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಮಾತನಾಡಿ, ೨೦೧೯ ರಲ್ಲಿ ಜನರಲ್ ತಿಮ್ಮಯ್ಯ ಸ್ಮಾರಕ ಭವನ ಮುಂದುವರೆದ ಕಾಮಗಾರಿಗೆ ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ೫೦ ಲಕ್ಷ ರೂ. ಬಿಡುಗಡೆಗೆ ಆದೇಶವಾಗಿದ್ದು, ಈ ಸಂಬಂಧ ಅನುದಾನ ಬಿಡುಗಡೆಗೆ ಅಧ್ಯಕ್ಷರಲ್ಲಿ ಕೋರಿದರು. ಗಾಂಧಿ ಮಂಟಪದ ಆವರಣದಲ್ಲಿ ಗಾಂಧಿ ಸ್ಮಾರಕ ಉದ್ಯಾನವನ ಅಭಿವೃದ್ಧಿಗೆ ಅಗತ್ಯ ಸಹಕಾರಕ್ಕೆ ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಜಿ.ಪಂ.ಯೋಜನಾ ನಿರ್ದೇಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಶೇಖರ್, ಐಟಿಡಿಪಿ ಇಲಾಖಾ ಅಧಿಕಾರಿ ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎನ್.ಮಂಜುನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪುಟ್ಟರಾಜು, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಇತರರು ಹಲವು ಮಾಹಿತಿ ನೀಡಿದರು.