

ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಅಕ್ಷತ್ತದಗಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಸ್ವಾಮಿಗೆ ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಅಮಾವಾಸ್ಯೆ ಅಂಗವಾಗಿ ದೇಗುಲವನ್ನು ವಿವಿಧ ಪುಷ್ಪ, ತಳಿರು ತೋರಣದಿಂದ ಸಿಂಗರಿಸಲಾಗಿತ್ತಲ್ಲದೆ, ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ದೇಗುಲದಲ್ಲಿ ಸಂಜೆ 6.30 ರಿಂದ ರಾತ್ರಿ 8.30ರವರೆಗೆ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ಬೇಡಗಂಪಣ ಅರ್ಚಕರು ಮಾದಪ್ಪನಿಗೆ ವಿವಿಧ ಅಭಿಷೇಕವನ್ನು ನೆರವೇರಿಸಿದರು. ಬಳಿಕ ಎಣ್ಣೆಮಜ್ಜನ ಸೇವೆಯನ್ನು ನೆರವೇರಿಸಿ ಧೂಪ, ದೀಪಧಾರತಿ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು.
ಸಂಜೆ 7 ಗಂಟೆಗೆ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಹೆಚ್ಚಿನ ಭಕ್ತರು ಭಾಗಿಯಾಗಿದ್ದರು. ಹರಕೆ ಹೊತ್ತ ಭಕ್ತರು ದೇಗುಲದ ಸುತ್ತಾ ದಂಡಿನ ಕೋಲನ್ನು ಹೊತ್ತು ಪ್ರದಕ್ಷಿಣೆ ಹಾಕುವುದರ ಮೂಲಕ ಸ್ವಾಮಿ ಕೃಪೆಗೆ ಪಾತ್ರರಾದರು. ಈ ವೇಳೆ ಭಕ್ತರು ಉಘೇ ಮಾದಪ್ಪ ಉಘೇ, ಜೈ ಮಹತ್ ಮಲೆಯಾ… ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಭಕ್ತಿ-ಭಾವವನ್ನು ಮೆರೆದರು. ಇನ್ನು ಮಂಗಳವಾರವೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೆಚ್ಚಿನ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಉತ್ಸವಗಳಲ್ಲಿ ಭಾಗಿಯಾದ ಭಕ್ತರು: ಮ.ಬೆಟ್ಟಕ್ಕೆ ಆಗಮಿಸಿದ ಹರಕೆ ಹೊತ್ತ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆ (ದೇಗುಲದ ಸುತ್ತ ಕಸ ತೆಗೆಯುವ ಕಾರ್ಯ) ಕೈಗೊಂಡು ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಕೆಲ ಭಕ್ತರು ದೇಗುಲದ ಸುತ್ತಾ ಹುಲಿ, ಬಸವ ಹಾಗೂ ರುದ್ರಾಕ್ಷಿ ವಾಹನ ಉತ್ಸವಾದಿಗಳಲ್ಲಿ ಭಾಗಿಯಾಗಿದ್ದರು. ಈ ವೇಳೆ ಭಕ್ತರು ಜಯಘೋಷಗಳನ್ನು ಮೊಳಗಿಸಿದರು. ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅನ್ನ ದಾಸೋಹ, ಕುಡಿಯುವ ನೀರು ಸೇರಿದತೆ ಇನ್ನಿತರ ಅಗತ್ಯ ಮೂಲ ಸೌಕರ್ಯ ಒದಗಿಸಲಾಗಿತ್ತು.