

ಚಿಕ್ಕೋಡಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿ ಸಹಯೋಗದಲ್ಲಿ ಡಿ.14 ರಂದು ಚಿಕ್ಕೋಡಿಯಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದೆ ಎಂದು 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕಾವೇರಿ ತಿಳಿಸಿದರು.
ಇಲ್ಲಿನ ಜಿಲ್ಲಾ ನ್ಯಾಯಾಲಯದ ಸಭಾಗೃಹದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಕಂಡುಕೊಳ್ಳಲು ಇದೊಂದು ಸುವರ್ಣಾವಕಾಶ ಎಂದರು.
ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪನೆ, ವಿದ್ಯುತ್ ಹಾಗೂ ನೀರಿನ ಶುಲ್ಕ ಜತೆಗೆ ರಾಜೀಯಾಗಬಲ್ಲ ಅಪರಾಧಿಕ, ವೈವಾಹಿಕ, ಇತರೆ ಸಿವಿಲ್ ಹಾಗೂ ಕರ್ನಾಟಕ ರಿಯಲ್ ಎಸ್ಟೇಟ್, ಗ್ರಾಹಕರ ವೇದಿಕೆ, ಸಾಲ ವಸೂಲಾತಿ ನ್ಯಾಯಾಧೀಕರಣ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಚಿಕ್ಕೋಡಿಯ ಎಲ್ಲ ನ್ಯಾಯಾಲಯಗಳಲ್ಲಿ ಸಂಜೆ 4 ರಿಂದ 6 ಗಂಟೆ ವರೆಗೆ ಲೋಕ ಅದಾಲತ್ ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‌ಗಳು ಭೌತಿಕ ಹಾಗೂ ವಿಡಿಯೋ ಕಾಸ್ಪರೆನ್ಸ್ ಮೂಲಕ ನಡೆಯುತ್ತವೆ ಎಂದು ತಿಳಿಸಿದರು.
ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಹರೀಶ ಪಾಟೀಲ, 1ನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶೆ ತೃಪ್ತಿ ಧರಣೆ, ವಕೀಲರ ಸಂಘದ ಅಧ್ಯಕ್ಷ ಕಲ್ಮೇಶ ಕಿವಡ, ಅನ್ನಪೂರ್ಣಾ ಚೌಗಲಾ, ಸುಭಾಷ ಯರನಾಳೆ ಇತರರಿದ್ದರು.