ದಸರೆಯಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಬಿಂಬಿಸುವ ಕಲಾಕೃತಿ ಪ್ರದರ್ಶಿಸಿ

mysore
Published on

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳು ಪ್ರದರ್ಶಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲಾ ಪಂಚಾಯಿತಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ದಸರಾ ಸಿದ್ಧತೆ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.


ಈ ಬಾರಿ ದಸರಾದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳು ಪ್ರದರ್ಶನದೊಂದಿಗೆ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸ್ತಬ್ಧ ಚಿತ್ರಗಳು ಪ್ರದರ್ಶನಗೊಳ್ಳಬೇಕು ಎಂದು ತಿಳಿಸಿದರು.


ದಸರಾ ಮಹೋತ್ಸವಕ್ಕಾಗಿ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ ಎಂದ ಸಚಿವರು, ರಾಜ್ಯದಲ್ಲಿನ ಬರ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ದಸರಾ ಹಬ್ಬವನ್ನು ಸರಳವಾಗಿ, ಸಾಂಪ್ರದಾಯಿಕ ಆಚರಿಸಲಾಗಿತ್ತು. ಆದರೆ, ಈ ವರ್ಷ ಉತ್ತಮ ಮುಂಗಾರು ಮಳೆ ಆಗಿರುವುದರಿಂದ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು. ನೇಮಕಗೊಂಡಿರುವ 19 ದಸರಾ ಉಪಸಮಿತಿಗಳು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಮಾತನಾಡಿ, ಕಳೆದ ಬಾರಿ ಆಗಿರುವ ನ್ಯೂನತೆಗಳನ್ನು ಈ ಬಾರಿ ಸರಿಪಡಿಸಿಕೊಂಡು ಯಾವುದೇ ಅಡಚಣೆ ಹಾಗೂ ತೊಂದರೆ ಉಂಟಾಗದಂತೆ ಅಚ್ಚುಕಟ್ಟಾಗಿ ದಸರಾ ಆಚರಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಈ ಬಾರಿಯ ದಸರಾ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕ ಸಂಭ್ರಮ: 50, ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳನ್ನು ರಚಿಸಬೇಕು. ಕಳೆದ ಬಾರಿ ಪ್ರದರ್ಶನಗೊಂಡಿರುವ ಸ್ತಬ್ಧಚಿತ್ರ ಮತ್ತು ಕಲಾತಂಡಗಳ ಮೆರವಣಿಗೆಗಳು ಮರು ಪ್ರದರ್ಶನವಾಗಬಾರದು ಎಂದು ತಾಕೀತು ಮಾಡಿದರು.


ದಸರಾದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದ ಬಗ್ಗೆ ಎಚ್ಚರಿಕೆ ವಹಿಸಿ, ದಸರಾ ವೀಕ್ಷಿಸಲು ಬಂದಂತಹ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಯಾವುದೇ ರೀತಿಯ ನಿರಾಸೆಯಾಗದಂತೆ ನೋಡಿಕೊಳ್ಳಬೇಕು. ಅದ್ದೂರಿಯಾಗಿ ಕಾರ್ಯಕ್ರಮಗಳು ಜರುಗುವಂತೆ ಕ್ರಮ ವಹಿಸಬೇಕು. ಉಪಸಮಿತಿಯಲ್ಲಿನ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು. ಇದರೊಂದಿಗೆ ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.


ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಸಂಸದ ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ.ಗಾಯತ್ರಿ, ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ದಸರಾ 19 ಉಪ ಸಮಿತಿಯ ಕಾರ್ಯದರ್ಶಿಗಳು ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net