

ಮಾನ್ವಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜು.9ರಂದು ಗ್ರಾಮೀಣ ಬಂದ್ ಹಮ್ಮಿಕೊಳ್ಳಲಾಗಿದೆ ಎಂದು ಕೆಆರ್‌ಎಸ್ ಸಂಘದ ರಾಜ್ಯಾಧ್ಯಕ್ಷ ಡಿ.ಎಚ್. ಪೂಜಾರಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ರೈತರು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ.ರಾಜ್ಯ ಸರ್ಕಾರ ಹೊಸ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ರೈತರ ಪಂಪ್‌ಸೆಟ್‌ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಸುವ ಕಾಯ್ದೆ ವಾಪಸ್ ಪಡೆಯಬೇಕು.
ಮೂರು ತಲೆಮಾರುಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡಬೇಕು. ರೈತರೊಂದಿಗೆ ಸಂವಾದ, ಸಮಾಲೋಚನೆ ನಡೆಸದೆ ಮತ್ತು ಸಂವಿಧಾನ ಬಾಹಿರವಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಮಸೂದೆ ರದ್ದುಗೊಳಿಸಬೇಕು. ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ರಸಗೊಬ್ಬರ, ಬೀಜಗಳು ಮತ್ತು ಕೃಷಿ ಉಪಕರಣಗಳನ್ನು ಉಚಿತವಾಗಿ ಪೂರೈಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.
ಸಂಘದ ಜಿಲ್ಲಾಧ್ಯಕ್ಷ ಅಶೋಕ ನೀಲಗಲ್, ಚಿಟ್ಟಿಬಾಬು, ಬಸವರಾಜ, ಸ್ವಾಮಿದಾಸ, ಶಿವರಾಜದೊಡ್ಡಿ, ನಾಗರಾಜ,ರೇಣುಕಮ್ಮ ಇದ್ದರು.