ಬಂಟ್ವಾಳ ಪ್ರಥಮ ದರ್ಜೆ ಸಹಾಯಕನಿಗೆ 1 ಕೋಟಿ ರೂ.ದಂಡ!

Court
Published on

ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿದ್ದ ಉಪ್ಪಿನಂಗಡಿ ನಿವಾಸಿ ಯು.ಓಂಪ್ರಕಾಶ್ ಹೆಗ್ಡೆಗೆ ಮಂಗಳೂರು ನ್ಯಾಯಾಲಯ 4 ವರ್ಷಗಳ ಸಾದಾ ಸಜೆ ಮತ್ತು 1 ಕೋಟಿ ರೂ.ದಂಡ ವಿಧಿಸಿ ತೀರ್ಪು ನೀಡಿದೆ.

ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಬಗ್ಗೆ 2014ರ ಜ.28ರಂದು ಕರ್ನಾಟಕ ಲೋಕಾಯುಕ್ತ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾಗಿದ್ದು ಪ್ರಸ್ತುತ ಕಾರ್ಕಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿರುವ ಎಸ್.ವಿಜಯ ಪ್ರಸಾದ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಅವರು ಸೋಮವಾರ ತೀರ್ಪು ನೀಡಿದ್ದಾರೆ. ದಂಡ ಕಟ್ಟಲು ವಿಫಲನಾದರೆ ಮತ್ತೆ 1 ವರ್ಷ ಸಾದಾ ಸಜೆ ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕ ಲೋಕಾಯುಕ್ತ ಮಂಗಳೂರಿನ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net