

ಸಿದ್ದಾಪುರ: ಪಟ್ಟಣದ ಪ್ರಶಾಂತಿ ಪ್ರೌಢಶಾಲೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕು ಕಸಾಪ ಆಶ್ರಯದಲ್ಲಿ 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಕನ್ನಡ ಭಾಷಾ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳನ್ನು ಸೋಮವಾರ ಸನ್ಮಾನಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ನೀಡಿದರೆ ದೇಶದ ಆಸ್ತಿಯಾಗಿ ಬದಲಾಗುತ್ತಾರೆ ಎಂದರು.
ಅಧ್ಯಕ್ಷತೆವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ಬಿ.ಎನ್. ವಾಸರೆ ಮಾತನಾಡಿ, ಎಲ್ಲ ಭಾಷೆಗಳನ್ನು ಗೌರವಿಸುತ್ತಾ ಕನ್ನಡವನ್ನು ಬೆಳೆಸೋಣ. ಕನ್ನಡದ ಕುತ್ತಿಗೆ ಹಿಚುಕುವ ಮಟ್ಟಿಗೆ ಇಂಗ್ಲಿಷ್ ಮೋಹ ಬೇಡ ಎಂದರು.
ತಾಲೂಕು ಕಸಾಪ ಅಧ್ಯಕ್ಷ ಚಂದ್ರಶೇಖರ ಕುಂಬ್ರಿಗದ್ದೆ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿದ ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕ ಡಿ.ಆರ್.ನಾಯ್ಕ ಮಾತನಾಡಿದರು.
ಬಿಇಒ ಎಂ.ಎಚ್. ನಾಯ್ಕ, ಜಿಲ್ಲಾ ಕಸಾಪ ಕೋಶಾಧ್ಯಕ್ಷ ಮುರ್ತಜಾ ಹುಸೇನ್, ತಾಲೂಕು ಏಳನೇ ಕಸಾಪ ಸಮ್ಮೇಳನದ ಸರ್ವಾಧ್ಯಕ್ಷ ಜಿ.ಜಿ. ಹೆಗಡೆ ಬಾಳಗೋಡ, ಆಧಾರ ಸಂಸ್ಥೆ ಅಧ್ಯಕ್ಷ ನಾಗರಾಜ ನಾಯ್ಕ ಮಾಳ್ಕೋಡ, ತಾಲೂಕು ಗ್ಯಾರಂಟಿ ಅನುಷ್ಠ್ಠಾನ ಸಮಿತಿ ಅಧ್ಯಕ್ಷ ಕೆ.ಜಿ. ನಾಗರಾಜ, ಪ್ರಶಾಂತಿ ಶಿಕ್ಷಣ ಸಂಸ್ಥೆ ಟ್ರಸ್ಟಿ ದಿನೇಶ ಪಟೇಲ್, ಕಸಾಪ ಕೋಶಾಧ್ಯಕ್ಷ ಪಿ.ಬಿ. ಹೊಸೂರ, ಶಾಲಾಮುಖ್ಯ ಶಿಕ್ಷಕ ದಿನೇಶ ಶೆಟ್ಟಿ, ಇತರರು ಉಪಸ್ಥಿತರಿದ್ದರು.
ಉಪನ್ಯಾಸಕ ಪ್ರಶಾಂತ ಹೆಗಡೆ ಹಾಗೂ ಮೇಘನಾ ಶಿವಾನಂದ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು.