ಸರ್ಕಾರಿ ನೌಕರರಿಗೆ ಒಒಡಿ ಸೌಲಭ್ಯ

Published on

ಶಿರಸಿ: ನಗರದಲ್ಲಿ ಡಿ. 3 ಮತ್ತು 4ರಂದು ನಡೆಯಲಿರುವ ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಶಿಕ್ಷಕರು, ಉಪನ್ಯಾಸಕರು ಹಾಗೂ ಸರ್ಕಾರಿ ನೌಕರರಿಗೆ ಅನ್ಯ ಕಾರ್ಯ ನಿಮಿತ್ತ ರಜೆ (ಒಒಡಿ) ಸೌಲಭ್ಯವನ್ನು ನೀಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಬಿ. ಎನ್. ವಾಸರೆ ತಿಳಿಸಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಶಿರಸಿ ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರು, ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಒಒಡಿ ಆದೇಶ ಜಾರಿ ಮಾಡಿದ್ದಾರೆ. ಹಾಗೂ ಜಿಲ್ಲೆಯ ಆಸಕ್ತ ಸರ್ಕಾರಿ ನೌಕರರು ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು ಓಓಡಿ ಆದೇಶವನ್ನು ನೀಡಿರುತ್ತಾರೆ. ಜತೆಗೆ ವಿಶೇಷವಾಗಿ ಡಿಸೆಂಬರ್ 3 ರಂದು ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಶಿರಸಿ ನಗರ ವ್ಯಾಪ್ತಿಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕ, ಶಿಕ್ಷಕಿಯರು ಕಡ್ಡಾಯವಾಗಿ ಭಾಗವಹಿಸುವಂತೆ ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರು ನಿರ್ದೇಶಿಸಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net