ನಾನು ಸಿಎಂ ಆಗಿರುವುದು ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ, ಸಿದ್ದರಾಮಯ್ಯ ಆಕ್ರೋಶ

IMG20240826195541.jpg
Published on

ಬೆಳಗಾವಿ: ಸಂಗೊಳ್ಳಿ ರಾಯಣ್ಣನನ್ನು ನಮ್ಮ ಕಡೆಯವರೇ ಬ್ರಿಟಿಷರಿಗೆ ಹಿಡಿದುಕೊಡುತ್ತಾರೆ. ಅದೇ ರೀತಿ ಹಿಂದುಳಿದ ವರ್ಗದ ನಾನು ಮುಖ್ಯಮಂತ್ರಿ ಆಗಿರುವುದು ವಿರೋಧಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದರು.

ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆ ಹಾಗೂ ಕಲ್ಲಿನ ಕಿರು ಕೋಟೆ ಅನಾವರಣಗೊಳಿಸಿ ಅವರು ಮಾತನಾಡಿದರು. ವೇದಿಕೆ ಮೇಲಿದ್ದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೆಸರು ಪ್ರಸ್ತಾಪಿಸಿದ ಅವರು, ಬಾಲಚಂದ್ರ ಯಾವಾಗಲೂ ನಮ್ಮ ಪರ. ಆದರೆ, ಅವರ ಸಹಪಾಠಿಗಳು ನನ್ನ ವಿರುದ್ಧ. ಹೇಗಾದರೂ ಮಾಡಿ ಸಿದ್ದರಾಮಯ್ಯನನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಪ್ರಯತ್ನಿಸುತ್ತಿದ್ದಾರೆ. ಆದರೆ, ಅದು ಎಂದಿಗೂ ಸಾಧ್ಯವಿಲ್ಲ. ನಾನು ಯಾವ ತಪ್ಪೂ ಮಾಡಿಲ್ಲ. ಎಲ್ಲಿಯವರೆಗೆ ನಿಮ್ಮ ಆಶೀರ್ವಾದ ಇರುತ್ತದೆಯೋ, ಅಲ್ಲಿಯವರೆಗೂ ನನ್ನ ಅಧಿಕಾರದಿಂದ ಕೆಳಗಿಳಿಸಲು ಯಾರ ಕೈಯಿಂದಲೂ ಸಾಧ್ಯವಿಲ್ಲ. ಒಬ್ಬ ಹಿಂದುಳಿದವ ಮುಖ್ಯಮಂತ್ರಿ ಆಗಿದ್ದಾನೆ ಎನ್ನುವುದನ್ನು ಇವರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಅದೇ ರೀತಿ ರಾಯಣ್ಣನನ್ನು ಮೋಸದಿಂದ ಹಿಡಿದಿದ್ದರು ಎಂದು ತಮ್ಮ ರಾಜಕೀಯ ವಿರೋಧಿಗಳಿಗೆ ಟಾಂಗ್ ಕೊಟ್ಟರು.

ಈ ವೇಳೆ ಶಿವಲಿಂಗ ಮುರುಘರಾಜೇಂದ್ರ ಸ್ವಾಮೀಜಿ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ಬಾಲಚಂದ್ರ ಜಾರಕಿಹೊಳಿ, ಅಶೋಕ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಡಾ. ರಾಜೇಂದ್ರ ಸಣ್ಣಕ್ಕಿ ಇತರರಿದ್ದರು.

ಬಾಕ್ಸ್...

ಬಾಲಚಂದ್ರ ಕಿವಿಹಿಂಡಿದ ಸಿಎಂ

ಕೌಜಲಗಿಯಲ್ಲಿ ವೇದಿಕೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಿವಿಯನ್ನು ಸಿಎಂ ಸಿದ್ದರಾಮಯ್ಯ ಹಿಂಡಿದರು. ಇದಕ್ಕೆ ಪ್ರತಿಯಾಗಿ ಮುಖ್ಯಮಂತ್ರಿಗಳಿಗೆ ಬಾಲಚಂದ್ರ ಕೈಮುಗಿದು ನಕ್ಕರು. ಕಾರ್ಯಕ್ರಮ ಮುಗಿದ ಬಳಿಕ ಆಯೋಜಕರು ಸಿಎಂ ಸಿದ್ದರಾಮಯ್ಯ ಅವರಿಗೆ ಕಂಬಳಿ ಹೊದಿಸಿ, ಬೆಳ್ಳಿ ಖಡ್ಗ ಮತ್ತು ರಾಯಣ್ಣನ ಮೂರ್ತಿ ನೀಡಿ ಸನ್ಮಾನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net