

ಮಡಿಕೇರಿ: ಕೊಡಗು ವಿವಿ ರದ್ದು ಮಾಡುವ ಕ್ರಮಕ್ಕೆ ಅಖಿಲ ಕೊಡವ ಸಮಾಜ ವಿರೋಧ ವ್ಯಕ್ತಪಡಿಸಿದೆ.
ಪತ್ರಿಕಾ ಹೇಳಿಕೆ ನೀಡಿರುವ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ಹಣಕಾಸು, ಮೂಲ ಸೌಕರ್ಯಗಳ ಕೊರತೆಯಿಂದ ನೂತನವಾಗಿ ಆರಂಭಿಸಲಾದ ವಿವಿಗಳನ್ನು ಮುಚ್ಚುವುದು ಅಥವಾ ಬೇರೆ ವಿವಿಗಳ ಜೊತೆ ವಿಲೀನಗೊಳಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಇದರ ಭಾಗವಾಗಿಯೇ ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ವಿಶ್ವ ವಿದ್ಯಾಲಯವನ್ನು ರದ್ದುಗೊಳಿಸುವ ಚಿಂತನೆಯನ್ನು ಸರ್ಕಾರ ವ್ಯಕ್ತಪಡಿಸಿದೆ. ಆದರೆ, ಸರ್ಕಾರದ ಈ ನಿರ್ಣಯ ಸೂಕ್ತವಾದದ್ದು ಅಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿವಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಣಯ ಸರಿಯಲ್ಲ. ಸರಕಾರದ ಈ ನಿರ್ಣಯ ಜಿಲ್ಲೆಗೆ ಅಘಾತವುಂಟು ಮಾಡಿದ್ದು, ವಿದ್ಯಾರ್ಥಿಗಳು ಸರ್ಕಾರದ ನಿರ್ಣಯದಿಂದ ಅತಂತ್ರ ಸ್ಥಿತಿಗೆ ಸಿಲುಕುವ ಆತಂಕವಿದೆ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಸರ್ಕಾರ ಹಿಂದೆ ಸರಿಯಬೇಕು: ಕೊಡಗು ಜಿಲ್ಲೆಗೆ ಪ್ರತ್ಯೇಕವಾದ ವಿಶ್ವ ವಿದ್ಯಾಲಯ ಬೇಕು ಎನ್ನುವ ಚಿಂತಕರ ಹಾಗೂ ವಿದ್ಯಾರ್ಥಿಗಳ ಕನಸು ಸುಮಾರು ಎರಡು ವರ್ಷಗಳ ಹಿಂದೆ ನನಸಾಯಿತು. ಆದರೆ, ಪ್ರಸ್ತುತ ರಾಜ್ಯದಲ್ಲಿರುವ ಸರ್ಕಾರ ವಿವಿಯನ್ನು ಮುಚ್ಚುವ ನಿರ್ಧಾರಕ್ಕೆ ಬಂದಿದ್ದು, ಇದು ಕೊಡಗಿನ ಜನರ ಭಾವನೆಗೆ ವಿರುದ್ಧವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು, ಹಿಂದುಳಿದ ವರ್ಗದ ವಿದ್ಯಾರ್ಥಿಗಳೇ ಹೆಚ್ಚಿದ್ದಾರೆ. ಜೊತೆಗೆ ಸ್ನಾತಕೋತ್ತರ ಪದವಿಯಲ್ಲಿ ೩೯೦ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ವಿವಿಯನ್ನು ಮುಚ್ಚುವ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕು. ಬಡ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸ್ಥಾಪನೆಯಾಗಿರುವ ವಿವಿಗಳಿಗೆ ಅಗತ್ಯ ಅನುದಾನ ನೀಡಲು ಸರ್ಕಾರ ಹಿಂದೆ ಸರಿಯಬಾರದು ಎಂದು ಅಖಿಲ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಚರಣಿಯಂಡ ರಾಣು ಅಪ್ಪಣ್ಣ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.