ಶಿಲುಬೆ ಬೆಟ್ಟದಲ್ಲಿ ಗಣಿಗಾರಿಕೆಗೆ ವಿರೋಧ

ಶಿಲುಬೆ ಬೆಟ್ಟದಲ್ಲಿ ಗಣಿಗಾರಿಕೆಗೆ ವಿರೋಧ
Published on

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಕೆಂಚಮ್ಮನ ಹೊಸಕೋಟೆ ಹೋಬಳಿ ಹೊಸಮಠ ಗ್ರಾಮದ ಶಿಲುಬೆ ಬೆಟ್ಟದಲ್ಲಿ ಗಣಿಗಾರಿಕೆಗೆ ಅವಕಾಶ ನೀಡದಂತೆ ರೈತ ಸಂಘ, ಕ್ರೈಸ್ತ ಧರ್ಮ ಗುರುಗಳು ಮತ್ತು ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಚಿಕ್ಕಮಗಳೂರಿನ ಜಯಬಸವಾನಂದ ಸ್ವಾಮೀಜಿ ಶಿಲುಬೆ ಬೆಟ್ಟದಲ್ಲಿ ಗಣಿಗಾರಿಕೆಯಿಂದಾಗಿ ಗ್ರಾಮಸ್ಥರು ಅನೇಕ ತೊಂದರೆ ಅನುಭವಿಸುತ್ತಿದ್ದಾರೆ. ಬಾರಿ ವಾಹನಗಳ ಸಂಚಾರದಿಂದ ರಸ್ತೆಗಳು ಹಾಳಾಗಿವೆ. ಗಣಿಗಾರಿಕೆಗೆ ಬಳಸುವ ಸ್ಫೋಟಕದಿಂದ ಕಾಡು ಪ್ರಾಣಿಗಳು, ಕಾಡಾನೆಗಳು ಕೃಷಿ ಭೂಮಿಯನ್ನು ಹಾಳು ಮಾಡುತ್ತಿವೆ. ಆದ್ದರಿಂದ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಹಿಂದೆ ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಪಟೇಲ್ ಅವರು ಪ್ರತಿಭಟನೆ ಮಾಡಿದ್ದರು. ಆದರೆ ಅವರ ವಿರುದ್ಧ ಜಾತಿ ನಿಂದನೆ ಆರೋಪ ಹೊರಿಸಿ ಪ್ರಕರಣ ದಾಖಲಿಸಿರುವುದನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡರಾದ ಆನೆಕೆರೆ ರವಿ ಮಾತನಾಡಿ, ಹಲವು ದಿನಗಳಿಂದ ಶಿಲುಬೆ ಬೆಟ್ಟದಲ್ಲಿ ಗಣಿಗಾರಿಕೆ ಸ್ಥಗಿತ ಮಾಡುವಂತೆ ಪ್ರತಿಭಟನೆ ಮಾಡಲಾಗುತ್ತಿದೆ. ಆದರೆ ಕೆಲವು ಹಿತಾಸಕ್ತಿಗಳು ಇಲ್ಲಸಲ್ಲದ ಆರೋಪ ಮಾಡಿ ಹೋರಾಟಗಾರರ ಮೇಲೆ ಪ್ರಕರಣ ದಾಖಲು ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ಗಣಿಗಾರಿಕೆಯಿಂದ ಆಗುತ್ತಿರುವ ತೊಂದರೆಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಗಣಿಗಾರಿಕೆ ಸ್ಥಗಿತ ಮಾಡುವಲ್ಲಿ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಬಾಬು, ಮಂಜುನಾಥ್, ಮಹಮದ್ ಸಾಧಿಕ್, ಸುಧಾ ಗಿರೀಶ್, ರಂಗಮ್ಮ, ಪವಿತ್ರಾ, ಕುಮಾರ್, ಜಯಣ್ಣ, ಶಿವರಾಮೇಗೌಡ, ಕಮಲಮ್ಮ , ಧರ್ಮೇಗೌಡ, ಕಾಳಯ್ಯ ಸೇರಿದಂತೆ ನೂರಾರು ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net