

ಚಿಕ್ಕಮಗಳೂರು: ನಗರದ ಹೊರವಲಯದ ಗವನಹಳ್ಳಿಯ ಸರ್ವೇ ನಂಬರ್ 93ರಲ್ಲಿ ನಿರ್ಮಿಸಿರುವ ಅಂಬೇಡ್ಕರ್ ಪ್ರತಿಮೆ ತೆರವಿಗೆ ದಲಿತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದು, 14ರಂದು ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಪ್ರತಿಮೆ ಇರುವ ಜಾಗದಲ್ಲೇ ಜಯಂತಿ ಆಚರಣೆಗೆ ಅವಕಾಶ ನೀಡುಬೇಕು ಎಂದು ದಲಿತ ಸಂಘಟನೆಗಳು ಪಟ್ಟು ಹಿಡಿದಿರುವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.
ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಸ್ಥಾಪನೆಗೆ ನಗರದ ಹೊರವಲಯದ ಸರ್ವೇ ನಂ.93 ಗವನಹಳ್ಳಿಯಲ್ಲಿನ ಜಾಗ ಮಂಜೂರು ಕೋರಿದ್ದ ದಲಿತ ಸಂಘಟನೆಗಳು 14ರಂದು ಅದೇ ಸ್ಥಳದಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲು ಮುಂದಾಗಿರುವುದು ಜಿಲ್ಲಾಡಳಿತಕ್ಕೆ ಹೊಸ ಸಮಸ್ಯೆ ತಂದಿಟ್ಟಿದೆ.
ಈ ಹಿಂದೆ ಈ ಸ್ಥಳದಲ್ಲಿ ಬುದ್ಧನ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿತ್ತು. ಇದೀಗ ಅದರ ಬೆನ್ನಲ್ಲೇ ಶನಿವಾರ ಏಕಾಏಕಿ ದಲಿತ ಸಂಘಟನೆಗಳು ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ಮಾಡಿದ್ದರು. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ತಾಲೂಕು ಆಡಳಿತ ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪಿಸಿದ್ದ ಅಂಬೇಡ್ಕರ್ ಪ್ರತಿಮೆ ತೆರವಿಗೆ ಮುಂದಾಗಿತ್ತು. ಇದಕ್ಕೆ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದರು.
ಪೊಲೀಸ್ ತುಕಡಿಯೊಂದಿಗೆ ಸ್ಥಳಕ್ಕಾಗಮಿಸಿದ ಎಸಿ ದಲ್ಜಿತ್ ಕುಮಾರ್, ತಹಸೀಲ್ದಾರ್ ಸುಮಂತ್ ಹಾಗೂ ಪೊಲೀಸ್ ಅಧಿಕಾರಿಗಳಿಗೆ ದಲಿತ ಸಂಘಟನೆಗಳ ಕಾರ್ಯಕರ್ತರು ಅಂಬೇಡ್ಕರ್ ಪ್ರತಿಮೆ ಬಳಿ ಹೋಗಲು ಬಿಡಲಿಲ್ಲ. ನೂರಾರು ಕಾರ್ಯಕರ್ತರು ಸ್ಥಳದಲ್ಲಿಯೇ ಪ್ರತಿಭಟನೆಗೆ ಕುಳಿತು ಅಂಬೇಡ್ಕರ್ ಪ್ರತಿಮೆ ತೆರವುಗೊಳಿಸಬಾರದು ಎಂದು ಪಟ್ಟು ಹಿಡಿದಿದ್ದಾರೆ. ಮಾಜಿ ಶಾಸಕ ಹಾಗೂ ಅಂಬೇಡ್ಕರ್ ಅಧ್ಯಯನ ಸಂಸ್ಥೆ ಅಧ್ಯಕ್ಷ ಬಿ.ಬಿ.ನಿಂಗಯ್ಯ ಭಾನುವಾರ ಅಂಬೇಡ್ಕರ್ ಜಯಂತಿ ಇರುವ ಹಿನ್ನೆಲೆಯಲ್ಲಿ ಈ ಸ್ಥಳದಲ್ಲಿಯೇ ಜಯಂತಿ ಆಚರಣೆಗೆ ಅವಕಾಶ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.