ಜು.20ರವರೆಗೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

Published on

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಸಕ್ರಿಯವಾಗಿದ್ದು, ಈ ವಾರಾಂತ್ಯದವರೆಗೂ ಭಾರಿ ಮಳೆ ಸುರಿಯಲಿರುವ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುರುವಾರದಿಂದ ಭಾನುವಾರದವರೆಗೂ ಭಾರಿ ವರ್ಷಧಾರೆ ಆಗಲಿದ್ದು, ಈ ಆರೂ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಹಾಸನ, ಮೈಸೂರು, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಪ್ರಮಾಣದ ಮಳೆಯಾಗಲಿದ್ದು, ಉಳಿದ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಪ್ರಮಾಣದ ವರ್ಷಧಾರೆ ಆಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ ಹೊರತುಪಡಿಸಿ ಇನ್ನುಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೀನುಗಾರರಿಗೆ ಎಚ್ಚರಿಕೆ:

ಕರಾವಳಿ ತೀರದುದ್ದಕ್ಕೂ ಪ್ರತಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿರುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕೆಲವೊಮ್ಮೆ ಬಿರುಗಾಳಿ ಕೂಡ ಬೀಸುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲೂ ಗಾಳಿಯ ವೇಗ ಪ್ರತಿ ಗಂಟೆಗೆ 50 ಕಿ.ಮೀ. ವೇಗದಲ್ಲಿ ಬೀಸುವ ನಿರೀಕ್ಷೆ ಇದೆ.

ಒಳನಾಡು ಜಿಲ್ಲೆಗಳಲ್ಲಿ ಮಳೆ ಕೊರತೆ:

ಈ ಬಾರಿಯ ಮುಂಗಾರು ಆರಂಭವಾದಾಗಿನಿಂದ ಜೂ.1ರಿಂದ ಈವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಸರಾಸರಿ ಶೇ.5 ಹೆಚ್ಚು ಪ್ರಮಾಣದಲ್ಲಿ ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಶೇ.13, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಶೇ.7 ಅಧಿಕ ವರ್ಷಧಾರೆ ಆಗಿದೆ. ಆದರೆ, ಬೆಳಗಾವಿ ಹಾಗೂ ಧಾರವಾಡ ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಕೊರತೆ ಉಂಟಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಶೇ.4 ಮಳೆ ಕೊರೆತೆ ಉಂಟಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net