

ಚಿಕ್ಕಬಳ್ಳಾಪುರ: ಬಾಗೇಪಲ್ಲಿ ಹಾಗೂ ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ ಎಚ್.ಎನ್.ವ್ಯಾಲಿಯ ಎರಡನೇ ಹಂತದ ಸಂಸ್ಕರಿಸಿದ ನೀರು ತುಂಬಿಸುವ ಕಾಮಗಾರಿಗಳನ್ನು ಚುರುಕುಗೊಳಿಸಲು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಅಧಿಕಾರಿಗಳಿಗೆ ಸೂಚಿಸಿದರು.
ವೆಂಕಟಗಿರಿಕೋಟೆ ಕೆರೆ, ಕಂದವಾರ ಕೆರೆ ಹಾಗೂ ಪೂರ್ಣಸಾಗರ ಕೆರೆ ಬಳಿ ನಡೆಯುತ್ತಿರುವ ಪಂಪ್ ಹೌಸ್ ಕಾಮಗಾರಿ ವೀಕ್ಷಿಸಿ, ಮಾತನಾಡಿದರು.
ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಹರಿಸುವ ಎಚ್.ಎನ್.ವ್ಯಾಲಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವುದರಿಂದ ಜಿಲ್ಲೆಯ ರೈತರಿಗೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ನೀರಾವರಿ ಇಲಾಖೆಯ ದಕ್ಷಿಣ ವಿಭಾಗದ ಸೂಪರಿಂಟೆಂಡೆಂಟ್ ಇಂಜಿನಿಯರ್ ಸಂಜೀವ್ ರಾಜು, ಕಾರ್ಯಪಾಲಕ ಅಭಿಯಂತ ವಿಷ್ಣು ಕಾಮತ್ ಮತ್ತಿತರರು ಇದ್ದರು.