

ಹನೂರು: ಸರ್ಕಾರದಿಂದ ಸಿಗುವ ಸವಲತುಗಳನ್ನು ಸಮರ್ಪಕವಾಗಿ ಪಡೆಯಲು ಹಾಗೂ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕಾದರೆ ಪ್ರತಿಯೊಬ್ಬರೂ ಸಂಘಟಿತರಾಗಬೇಕು ಎಂದು ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಗೌಡಳ್ಳಿ ಸೋಮಣ್ಣ ತಿಳಿಸಿದರು.
ತಾಲೂಕಿನ ಬೂದಿಪಡಗ (ಆಂಡಿಪಾಳ್ಯ) ಗ್ರಾಮದಲ್ಲಿ ಗುರುವಾರ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಿ ಮಾತನಾಡಿದರು.
ಹನೂರು ಭಾಗದಲ್ಲಿ ಹೆಚ್ಚಿನ ರೈತರು ಕೃಷಿ ಮಾಡುತ್ತಿದ್ದಾರೆ. ಆದರೆ ಸರ್ಕಾರದಿಂದ ಸಿಗುವ ಸವಲತ್ತುಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಜತೆಗೆ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದರಿಂದ ಕೃಷಿಯಲ್ಲಿ ಹಿನ್ನಡೆ ಸಾಧಿಸುವಂತಾಗಿದೆ. ಇತ್ತ ಕಾಡು ಪ್ರಾಣಿಗಳು ಜಮೀನಿಗೆ ಲಗ್ಗೆ ಇಟ್ಟು ಫಸಲನ್ನು ನಾಶಪಡಿಸುತ್ತಿದ್ದು, ನಷ್ಟ ಅನುಭವಿಸುವಂತಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ಇದರಿಂದ ರೈತರು ತುಂಬಾ ತೊಂದರೆ ಪಡುವಂತಾಗಿದೆ. ಆದರೆ ರೈತರು ಸಂಘಟನೆಯ ಕೊರತೆಯಿಂದ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಒಗ್ಗಟ್ಟಿನಿಂದ ಸಂಘಟಿತರಾಗಬೇಕು. ಜತೆಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಈ ದೆಸೆಯಲ್ಲಿ ಗ್ರಾಮ ಘಟಕಗಳನ್ನು ಉದ್ಘಾಟಿಸಿರುವುದು ಅನುಕೂಲವಾಗಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಮಹೇಶ್, ಕಾರ್ಯದರ್ಶಿ ಪವನ್‌ಕುಮಾರ್, ಸಂಘಟನಾ ಕಾರ್ಯದರ್ಶಿ ಪ್ರಭುಸ್ವಾಮಿ, ತಾಲೂಕು ಅಧ್ಯಕ್ಷ ಚಿಕ್ಕರಾಜು, ಉಪಾಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ, ಕಾರ್ಯದರ್ಶಿ ಪ್ರಭುಸ್ವಾಮಿ, ಗ್ರಾಮ ಘಟಕದ ಅಧ್ಯಕ್ಷ ಕೃಷ್ಣ, ಉಪಾಧ್ಯಕ್ಷ ಕೆಂಪಗಾಮಶೆಟ್ಟಿ ಇದ್ದರು.