

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯನ್ನು ಡೆಂಘೆ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತ ಪಣತೊಟ್ಟಿದ್ದು, ಆರೋಗ್ಯ ಇಲಾಖೆ ಹಾಗೂ ನೋಡಲ್ ಅಽಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸಾರ್ವಜನಿಕರು ಸಹಕಾರ ನೀಡಬೇಕು. ಡೆಂಘೆ ಜನಜಾಗೃತಿ ಮತ್ತು ಡೆಂಘೆ ಮುಕ್ತ ಜಿಲ್ಲೆ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಮನವಿ ಮಾಡಿದರು.
ನಗರದ ನಿವೇದಿತಾ ಆದರ್ಶ ವಿದ್ಯಾಲಯ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಡೆಂಘೆ ಜನಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲೇ ಪ್ರಥಮ ಬಾರಿಗೆ ಧಾರವಾಡ ಜಿಲ್ಲೆಯಲ್ಲಿ ೧,೭೪೮ ಶಾಲಾ, ಕಾಲೇಜುಗಳಲ್ಲಿ ಏಕಕಾಲಕ್ಕೆ ಡೆಂಘೆ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕುಂದಗೋಳ, ಹುಬ್ಬಳ್ಳಿ, ನವಲಗುಂದ ತಾಲೂಕುಗಳಲ್ಲಿ ಸ್ವತಃ ಶಾಸಕರು ಭಾಗವಹಿಸಿ ಪ್ರೋತ್ಸಾಹಿಸಿದ್ದಾರೆ. ಒಟ್ಟಾರೆ ಡೆಂಘೆ ಜಾಗೃತಿ ಕಾರ್ಯಕ್ರಮದಲ್ಲಿ ೨,೯೭,೫೦೦ ವಿದ್ಯಾರ್ಥಿಗಳು ಮತ್ತು ೧೧,೩೦೬ ಶಿಕ್ಷಕರು, ಸಿಬ್ಬಂದಿ ಭಾಗವಹಿಸಿ ದಾಖಲೆ ಮಾಡಿದ್ದಾರೆ. ಇಷ್ಟು ಪ್ರಮಾಣದ ವಿದ್ಯಾರ್ಥಿಗಳು ಮತ್ತು ಇತರರು ಡೆಂಘೆ ಜಾಗೃತಿಯಲ್ಲಿ ನೇರವಾಗಿ ಭಾಗವಹಿಸಿದ್ದು, ಡೆಂಘೆ ಮುಕ್ತ ಜಿಲ್ಲೆ ಮಾಡುವ ನಮ್ಮ ಸಂಕಲ್ಪಕ್ಕೆ ಬಲ ಬಂದಿದೆ ಎಂದರು.
ತಾಲೂಕು ವೈದ್ಯಾಧಿಕಾರಿ ಡಾ. ಕೆ.ಎನ್. ತನುಜಾ ಡೆಂಘೆ ಕುರಿತು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ಜಿಪಂ ಉಪಕಾರ್ಯದರ್ಶಿ ಬಿ.ಎಸ್. ಮೂಗನೂರಮಠ, ಡಿಡಿಪಿಐ ಎಸ್.ಎಸ್. ಕೆಳದಿಮಠ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಮಂಜುನಾಥ ಸೊಪ್ಪಿಮಠ, ಶಿಕ್ಷಣ ಇಲಾಖೆ ಡಿವೈಪಿಸಿ ಎಸ್.ಎಂ.ಹುಡೇದಮನಿ, ಶಹರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ಆದರ್ಶ ವಿದ್ಯಾಲಯದ ಪ್ರಾಂಶುಪಾಲ ಎಚ್.ಎಸ್.ಉಪ್ಪಾರ, ನಿವೇದಿತಾ ಶಾಲೆ ಪ್ರಾಂಶುಪಾಲ ಪಟ್ಟಣಕೊಡಿ, ಇತರರು ಇದ್ದರು.
ಹುಬ್ಬಳ್ಳಿ ತಾಲೂಕಿನ ಕುರಡಿಕೇರಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ಡೆಂಘೆ ತಡೆಗಟ್ಟುವ ಕುರಿತು ಮತ್ತು ಧಾರವಾಡ ಶ್ರೀಯಾ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ರೀತಿಯ ಸೊಳ್ಳೆಗಳು, ಸಾಂಕ್ರಾಮಿಕ ರೋಗಗಳು, ಅವುಗಳಿಂದ ರಕ್ಷಣೆ ಕುರಿತು ಕಿರು ನಾಟಕ ಪ್ರದರ್ಶಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಶಿ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಆರ್‌ಸಿಎಚ್‌ಒ ಡಾ. ಸುಜಾತಾ ಹಸವಿಮಠ ನಿರೂಪಿಸಿದರು.