

ಕೊಳ್ಳೇಗಾಲ: ಅಹಿಂಸ ಮಾರ್ಗದಲ್ಲಿ ಸ್ವಾತಂತ್ರ್ಯ ಪಡೆದ ದೇಶ ನಮ್ಮದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ಶ್ರೀ ಮಹದೇಶ್ವರ ಕಾಲೇಜು ಆವರಣದಲ್ಲಿ ಶುಕ್ರವಾರ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ 79ನೇ ಸ್ವಾತಂತ್ರ್ಯ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರ ನೇತೃತ್ವದಲ್ಲಿ ನೆಹರು, ಬಾಲಗಂಗಾಧರ ತಿಲಕ್, ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್ ಹೀಗೆ ಹಲವಾರು ಮಹಾತ್ಮರ ಹೋರಾಟದ ಫಲವಾಗಿ ನಮಗೆ ಸ್ವಾತಂತ್ರ್ಯ ದೊರೆತಿದೆ. ಅಹಿಂಸ ಮಾರ್ಗದಲ್ಲಿ ಸ್ವಾತಂತ್ರ್ಯ ಪಡೆದ ದೇಶ ನಮ್ಮದಾಗಿರುವುದು ಹೆಮ್ಮೆಯ ವಿಚಾರ ಎಂದರು.
ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಎಲ್ಲ ಮಹಾತ್ಮರನ್ನು ನಾವು ಸ್ಮರಿಸಬೇಕಿದೆ. ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ. ಇಲ್ಲಿಯವರೆಗೂ ದೇಶದಲ್ಲಿ ಹಲವು ಪ್ರಧಾನಿಗಳು, ರಾಜ್ಯದಲ್ಲಿ ಅನೇಕ ಮುಖ್ಯ ಮಂತ್ರಿಗಳು ದೇಶವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸಾಮಾನ್ಯರಿಗೆ ವಿವಿಧ ಭಾಗ್ಯಗಳನ್ನು ನೀಡಿದ್ದಾರೆ. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ ನೀರಾವರಿ ಯೋಜನೆಗೆ ಒತ್ತು ನೀಡಲಾಗಿದೆ. ಆರೋಗ್ಯ ಹಾಗೂ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡಿದ್ದಾರೆ ಎಂದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಉಪವಿಭಾಗಾಧಿಕಾರಿ ದಿನೇಶ್‌ಕುಮಾರ್ ಮೀನಾ ಅವರು ಧ್ವಜಾರೋಹಣ ನೇರವೇರಿಸಿದರು. ಪಟ್ಟಣ ಪೊಲೀಸರು ಮತ್ತು ಶಾಲಾ ಮಕ್ಕಳು ಆಕರ್ಷಕ ಪಥ ಸಂಚಲನ ನಡೆಸಿದರು. ಬಳಿಕ ಅನಾಥ ಶವಗಳನ್ನು ಆಂಬುಲೆನ್ಸ್ ನಲ್ಲಿ ಸಾಗಿಸಿ ಶವಸಂಸ್ಕಾರ ಮಾಡುವಲ್ಲಿ ನಿರಂತರರಾಗಿರುವ ಚಾಲಕ ರಾಜೇಶ್ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಸರ್ಕಾರಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.
ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ, ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಎ.ಪಿ.ಶಂಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ತಹಸೀಲ್ದಾರ್ ಬಸವರಾಜು, ಗುರುಶಾಂತಪ್ಪ ಬೆಳ್ಳುಂಡಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಮಂಜುಳಾ ಇತರರು ಇದ್ದರು.