

ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಗುತ್ತಿಗೆ ಪದ್ದತಿ ಬದಲು ನೇರಪಾವತಿ ಜಾರಿಗೊಳಿಸಲು ಅಗತ್ಯ ಪ್ರಸ್ತಾವನೆ ಸಿದ್ಧಪಡಿಸುವಂತೆ ಪೌರಾಡಳಿತ ಸಚಿವ ರಹೀಂಖಾನ್ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿಕಾಸ ಸೌಧದ ಸಭಾಂಗಣದಲ್ಲಿ ಗುರುವಾರ ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರ ಪ್ರತಿನಿಧಿಗಳು ಹಾಗೂ ಪೌರಾಡಳಿತ ಮತ್ತು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳ ಜಂಟಿ ಸಭೆಯಲ್ಲಿ ಅವರು ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸ್ವಚ್ಚತೆ ಹಾಗೂ ಕುಡಿಯುವ ನೀರು ವಿಭಾಗದಲ್ಲಿ ತೊಡಗಿಕೊಂಡಿರುವ ಹೊರಗುತ್ತಿಗೆ ನೌಕರರು ಕೋವಿಡ್ ಸಂದರ್ಭದಲ್ಲಿ ಜೀವದ ಹಂಗೂ ತೊರೆದು ಕರ್ತವ್ಯ ನಿರ್ವಹಿಸಿದ್ದಾರೆ. ಅನಗತ್ಯವಾಗಿ ಏಜೆನ್ಸಿಗಳ ಶೋಷಣೆಗೆ ಸಿಲುಕಿಸುವ ಗುತ್ತಿಗೆ ಪದ್ದತಿ ಬದಲು ಪೌರ ಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ತರಲು ಅಗತ್ಯ ಪ್ರಸ್ತಾವನೆ ಸಿದ್ದಪಡಿಸುವಂತೆ ನಗರಾಭಿವೃದ್ಧಿ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್‌ರಿಗೆ ಸೂಚನೆ ನೀಡಿದರು.
ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಪೌರಾಡಳಿತ ಇಲಾಖೆ ನಿರ್ದೇಶಕಿ ಎನ್. ಮಂಜುಶ್ರೀ, ಕರಾವಳಿ ವಿಭಾಗ ಸಂಚಾಲಕ ಅಣ್ಣಪ್ಪ ಕಾರೇಕಾಡು, ಕರುನಾಡ ಸೇವಕರು ಸಂಘದ ಎಂ.ಎನ್ ಚಂದ್ರು, ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.