

ನಂದಗುಡಿ: ನಂದಗುಡಿ ಭಾಗದಲ್ಲಿ ವಿವಿಧ ಅಧಿಕಾರಿಗಳ ತಂಡ ಭೇಟಿ ನೀಡಿ ಟೌನ್‌ಶಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ರೂಪು ರೇಷೆಗಳನ್ನು ಸಿದ್ಧಪಡಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಶಾಸಕರು ನೀಡಿದ ಭರವಸೆ ಹುಸಿಯಾಗುತ್ತಿದೆ ಎಂದು ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಅಧ್ಯಕ್ಷ ಕೆಂಚೇಗೌಡ ಅಸಮಾಧಾನ ವ್ಯಕ್ತಪಡಿಸಿದರು.
ನಂದಗುಡಿಯ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ರೈತರ ವಿರೋಧದ ನಡುವೆಯೂ ಸದ್ದಿಲ್ಲದೆ ಅಧಿಕಾರಿಗಳ ತಂಡ ಭೇಟಿ ಕೊಟ್ಟು, ಟೌನ್‌ಶಿಪ್ ನಿರ್ಮಾಣಕ್ಕೆ ರೂಪು ರೇಷೆಗಳನ್ನು ಸಿದ್ಧಪಡಿಸುತ್ತಿದ್ದು, ರೈತರು ಎಚ್ಚೆತ್ತುಕೊಳ್ಳದಿದ್ದರೆ ಭೂಮಿ ಕಳೆದುಕೊಳ್ಳಬೇಕಾಗುತ್ತದೆ ಎಂದರು. ನಂದಗುಡಿ ಹಾಗೂ ಸೂಲಿಬೆಲೆ ವ್ಯಾಪ್ತಿಯ 36 ಗ್ರಾಮಗಳ 18,500 ಸಾವಿರ ಎಕರೆ ಫಲವತ್ತಾದ ಕೃಷಿ ಭೂಮಿಯಲ್ಲಿ ಟೌನ್‌ಶಿಪ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದ್ದು, ಯಾವುದೇ ಕಾರಣಕ್ಕೂ ಭೂ ಸಾಧ್ವೀನಕ್ಕೆ ಅವಕಾಶ ಕೊಡುವುದಿಲ್ಲವೆಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು ಎಂದರು.
ನಂದಗುಡಿ ಭಾಗದ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ, ರೈತರ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದ್ದು, ನಂದಗುಡಿ ಭೂ ಸಾಧ್ವೀನ ಪ್ರಕ್ರಿಯೆ ಕಡೇ ಸ್ಥಾನದಲ್ಲಿರುವಂತೆ ಸರ್ಕಾರದ ಮಟ್ಟದಲ್ಲಿ ಕಾಳಜಿ ವಹಿಸುತ್ತೇನೆ. ಅಗತ್ಯ ಬಿದ್ದರೆ ನಿಮ್ಮ ಹೋರಾಟದಲ್ಲಿ ನಾನು ಭಾಗಿಯಾಗುತ್ತೇನೆ ಎಂದು ಶಾಸಕ ಶರತ್ ಬಚ್ಚೇಗೌಡ ಸ್ಥಳೀಯ ರೈತರ ಸಭೆ ಕರೆದು ಭರವಸೆ ನೀಡಿದ್ದರೂ, ಅಧಿಕಾರಿಗಳು ಸದ್ದಿಲ್ಲದೆ ಭೂ ಸ್ವಾಧೀನ ಪ್ರಕ್ರಿಯೆಗೆ ಮುಂದಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದರು. ಭೂ-ಸ್ವಾಧೀನ ವಿರೋಧಿ ಹೋರಾಟ ಸಮಿತಿ ಪದಾಧಿಕಾರಿಗಳು, ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಸದಸ್ಯರು, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ರೈತ ಮುಖಂಡರು ಇದ್ದರು.
ಭೂಮಿ ಕೊಡುವುದಿಲ್ಲ
ಸರ್ಕಾರ ಟೌನ್‌ಶಿಪ್ ಹೆಸರಿನಲ್ಲಿ ರೈತರ ಜತೆ ಆಟವಾಡುತ್ತಿದೆ. ನಮ್ಮಿಂದ ಅಧಿಕಾರ ಪಡೆದು ನಮ್ಮ ಕುತ್ತಿಗೆ ಕೊಯ್ಯುವ ಕೆಲಸ ಮಾಡುತ್ತಿದ್ದು, ನಮ್ಮ ಭೂಮಿ ಉಳಿಸಿಕೊಳ್ಳಲು ಹೊಸಕೋಟೆ, ವಿಧಾನಸೌಧ, ರಾಜಭವನ ಚಲೋ ಜತೆಗೆ ಕಾನೂನಾತ್ಮಕ ಹೋರಾಟಕ್ಕೆ ಅಣಿಯಾಗಲು 36 ಗ್ರಾಮಗಳಲ್ಲಿ ತ್ವರಿತವಾಗಿ ರೈತರ ಸಮಿತಿ ರಚಿಸಿ ಮುಂದಿನ ಹೋರಾಟಕ್ಕೆ ಸಿದ್ಧರಾಗಬೇಕಿದೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಹಕ್ಕಲೇಗೌಡ ಕರೆ ನೀಡಿದರು. ಕೃಷಿಯನ್ನೇ ನೆಚ್ಚಿಕೊಂಡು ಜೀವನ ಸಾಗಿಸುತ್ತಿರುವ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ರಾಜ್ಯ ಸರ್ಕಾರದ ಮುಂದಾಗಿದ್ದು, ಪ್ರಾಣ ಕೊಟ್ಟಾದರೂ ಸರಿ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ. 36 ಗ್ರಾಮಗಳ ರೈತರನ್ನು ಒಗ್ಗೂಡಿಸಿ, ಸರ್ಕಾರದಿಂದ ಅಧಿಕೃತವಾಗಿ ಭೂ-ಸ್ವಾಧೀನ ಪ್ರಕ್ರಿಯೆ ನಿಲ್ಲುವವರೆಗೂ ಹೋರಾಟಕ್ಕೆ ಸನ್ನದ್ಧರಾಗಬೇಕಿದೆ ಎಂದರು.