

ಮೈಸೂರು: ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ಆತ್ಮಹತ್ಯೆ ತಡೆಗಟ್ಟುವಂತೆ ಆಗ್ರಹಿಸಿ ರಾಜ್ಯ ರೈತ ಸಂಘದ ಜಿಲ್ಲಾ ಶಾಖೆ ವತಿಯಿಂದ ರಾಜ್ಯ ಸರ್ಕಾರ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಯಿತು.
2023ರ ಏಪ್ರಿಲ್‌ನಿಂದ 2024ರ ಜೂನ್‌ವರೆಗೆ ರಾಜ್ಯದಲ್ಲಿ 1,182 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಆತಂಕ ಉಂಟು ಮಾಡಿದೆ. ಆತ್ಮಹತ್ಯೆ ತಡೆಗೆ ರೈತರನ್ನು ಒಳಗೊಂಡ ಸಮಿತಿಯನ್ನು ರಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಾಂಗ್ರೆಸ್ ಸರ್ಕಾರದ ಒಂದು ವರ್ಷದ ಆಡಳಿತದಲ್ಲಿ ಪರಿಶಿಷ್ಟ ವರ್ಗಕ್ಕೆ ಮೀಸಲಿಟ್ಟ 187 ಕೋಟಿ ರೂ.ಗಳನ್ನು ದುರುಪಯೋಗ ಮಾಡಿಕೊಂಡ ಆರೋಪಕ್ಕೆ ಒಳಗಾಗಿದೆ. ಭೂ ಮಾಫಿಯಗಳ ಅಕ್ರಮಗಳು ನಿರಂತರವಾಗಿ ಸಾಗುತ್ತಲೇ ಇವೆ. ರೈತರ ಆತ್ಮಹತ್ಯೆಯೂ ಅಘಾತಕಾರಿಯಾಗಿದೆ ಎಂದು ಕಿಡಿಕಾರಿದರು.
ಕೃಷಿ ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ರೈತರು ಸ್ವತಃ ವೆಚ್ಚವನ್ನು ಭರಿಸಬೇಕೆಂಬ ತೀರ್ಮಾನವನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರವೇ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ನಿಗದಿ ಮಾಡಿ ಖರೀದಿಸಬೇಕು. ಬ್ಯಾಂಕ್‌ಗಳ ಸಾಲ ಬಾಕಿ ವಸೂಲಿಗಾಗಿ ರೈತರಿಗೆ ಕಿರುಕುಳ ನೀಡುತ್ತಿರುವುದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.
ಎಲ್ಲ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲು ಬಿಮಾ ಯೋಜನೆಯನ್ನು ವಿಸ್ತರಿಸಿ ಗ್ರಾಮ ಮಟ್ಟದಲ್ಲಿ ಬೆಳೆ ಹಾನಿ ನಿರ್ಧರಿಸಬೇಕು. ವಿಮಾ ಕಂಪನಿಗಳು ಉಳಿಸಿಕೊಂಡಿರುವ ಬಾಕಿಯನ್ನು ಕೂಡಲೇ ವಿತರಿಸಬೇಕು.
ಫಸಲು ಪಹಣಿ ದುರಸ್ತಿ, ಪಕ್ಕಾ ಪೋಡು, ಹದ್ದುಬಸ್ತು ಶುಲ್ಕ ದುಬಾರಿ ಆಗಿದೆ. ಈ ಶುಲ್ಕವನ್ನು ಕಡಿಮೆ ಮಾಡಬೇಕು. ಖರೀದಿ ಕೇಂದ್ರದಿಂದ ಖರೀದಿಸಲಾದ ಉತ್ಪನ್ನಗಳಿಗೆ ಕೂಡಲೇ ಹಣ ಕೊಡಬೇಕು. ಬರ ಪರಿಹಾರ, ವಿಮಾ ಪರಿಹಾರದ ಹಣವನ್ನು ಸಾಲಕ್ಕೆ ಜಮಾ ಮಾಡದಂತೆ ಬ್ಯಾಂಕ್‌ಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.
ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರಿಗೆ ಅರಣ್ಯ ಇಲಾಖಾ ಕಿರುಕುಳವನ್ನು ತಪ್ಪಿಸಬೇಕು. ಎಲ್ಲ ರೈತರಿಗೂ ಪಟ್ಟಾ ನೀಡಬೇಕು. ಕಾಡು ಪ್ರಾಣಿಗಳಿಂದ ಬೆಳೆ ನಷ್ಟಕ್ಕೆ ವೈಜ್ಞಾನಿಕ ನಷ್ಟ ನಿಗದಿಪಡಿಸಬೇಕು. ರೈತರ ಜಮೀನಿನಲ್ಲಿ ಸಾಗುವಾನಿ ಮರ ಕಡಿಯಲು, ಸಾಗಣೆ ಪ್ರಕ್ರಿಯೆ ಸರಳಗೊಳಿಸಬೇಕು ಎಂದು ಆಗ್ರಹಿಸಿದರು.
ಕಬ್ಬು ಬೆಳೆಗಾರರಿಗೆ ಕಾರ್ಖಾನೆಗಳು ಟನ್ ಒಂದಕ್ಕೆ 150 ರೂ. ಪಾವತಿಸಬೇಕೆಂದು ಹಿಂದಿನ ಸರ್ಕಾರ ಸೂಚಿಸಿತ್ತು. ಈ ವಿಷಯದಲ್ಲಿ ಎದುರಾಗಿರುವ ತಾಂತ್ರಿಕ ತೊಂದರೆ ನಿವಾರಿಸಿ ರೈತರ ಖಾತೆಗೆ ಹಣ ಜಮೆ ಮಾಡಬೇಕು. ಎಸ್‌ಎಪಿ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಭೂ ಸುಧಾರಣಾ ತಿದ್ದುಪಡಿ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು. ಕೆಆರ್‌ಎಸ್ ಡ್ಯಾಂ ಬಳಿ ಟ್ರಯಲ್ ಬ್ಲಾಸ್ಟ್ ಮಾಡಬಾರದು. ಜಲಾಶಯದ ಸುತ್ತಮುತ್ತ ಗಣಿಗಾರಿಕೆ ನಿಷೇಧಿಸಬೇಕು. ಮುಡಾ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾವೇರಿ ಜಲಾಶಯದಲ್ಲಿ ನೀರಿನ ಶೇಖರಣೆ ಕಡಿಮೆ ಇರುವುದರಿಂದ ತಮಿಳುನಾಡಿಗೆ ನೀರು ಹರಿಸಬಾರದು. ಮೈಸೂರು ತಾಲೂಕು ಕೋಚನಹಳ್ಳಿ ರೈತರಿಗೆ ಮೋಸ ಮಾಡಿರುವ ಭೂಮಾಫಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಮುಖಂಡರಾದ ಹೊಸಕೋಟೆ ಬಸವರಾಜ್, ಪ್ರಸನ್ನ ಎನ್.ಗೌಡ, ಪಿ.ಮರಂಕಯ್ಯ ಇತರರಿದ್ದರು.