

ಮೈಸೂರು: ಜಿಲ್ಲಾಡಳಿತ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯಿಂದ ನಗರದಲ್ಲಿ ಶನಿವಾರ ಆಯೋಜಿಸಿದ್ದ ಕಾಯಕ ಶರಣರ ಜಯಂತಿ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಬಾರದಿದ್ದರಿಂದ ಆಕ್ರೋಶಗೊಂಡ ಮುಖಂಡರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಲಾಮಂದಿರದ ಕಿರು ರಂಗಮಂದಿರದಲ್ಲಿ ಕಾರ್ಯಕ್ರಮ ಆಯೋಜಿಸಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವ ಕೆ.ವೆಂಕಟೇಶ್ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಹೆಸರು ಆಹ್ವಾನ ಪತ್ರಿಕೆಯಲ್ಲಿ ಹಾಕಲಾಗಿತ್ತು. ಆದರೆ ಅವರು ಯಾರೂ ಆಗಮಿಸಿರಲಿಲ್ಲ. ಮಾಜಿ ಮೇಯರ್ ಪುರುಷೋತ್ತಮ್, ಲೇಖಕ ಕೃಷ್ಣಮೂರ್ತಿ ಚಮರಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ಕನ್ನಡಪರ ಹೋರಾಟಗಾರ ಮೋಹನ್‌ಕುಮಾರ್, ಸೋಮಯ್ಯ ಮಲೆಯೂರು ಇದ್ದರು.
ಇದೇ ವೇಳೆ ಕೆಲ ದಲಿತ ಮುಖಂಡರು ಮೈಸೂರು ಭಾಗದ ಸಚಿವ, ಶಾಸಕ, ಸಂಸದರು ಸೇರಿದಂತೆ ಯಾವೊಬ್ಬ ಜನಪ್ರತಿನಿಧಿಯೂ ಕಾರ್ಯಕ್ರಮಕ್ಕೆ ಬಾರದಿರುವುದು ದಲಿತ ಸಮುದಾಯದ ಕಾಯಕ ಶರಣರಾದ ಮಾದಾರ ಚೆನ್ನಯ್ಯ, ಮಾದಾರ ದೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಉರಿಲಿಂಗಪೆದ್ದಿ ಶರಣರಿಗೆ ಮಾಡಿದ ಅವಮಾನವಾಗಿದೆ ಎಂದು ಘೋಷಣೆ ಕೂಗಿದರು.
ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ಬೇಜವಾಬ್ದಾರಿಯಿಂದ ಕಾರ್ಯಕ್ರಮವನ್ನು ನಡೆಸುತ್ತಿದೆ ಎಂದು ಕಿಡಿಕಾರಿದರು. ಈ ವೇಳೆ ವೇದಿಕೆಯಲ್ಲಿ ಉಪಸ್ಥಿತರಿದ್ದ ಅತಿಥಿಗಳು ಶರಣರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮವನ್ನು ರದ್ದುಗೊಳಿಸಿದರು.