ವೇತನ ನೇರ ಪಾವತಿಗೊಳಪಡಿಸಲು ಒತ್ತಾಯ: ನಗರದಲ್ಲಿ ಹೊರಗುತ್ತಿಗೆ ಪೌರಕಾರ್ಮಿಕ ಪ್ರತಿಭಟನೆ

Outsourced civil labor protest mandya
Published on

ಮಂಡ್ಯ: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು ಹಾಗೂ ಬಾಕಿ ಇರುವ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಒತ್ತಾಯಿಸಿ ಮಂಗಳವಾರ ನಗರದಲ್ಲಿ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.

ನಗರಸಭೆ ಕಾರ್ಯಾಲಯದ ಆವರಣದಲ್ಲಿ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ಆಶ್ರಯದಲ್ಲಿ ಪೌರ ಚಾಲಕರು, ನೀರುಗಂಟಿಗಳು, ಲೋಡರ್ಸ್, ಕ್ಲೀನರ್ಸ್, ಹೆಲ್ಪರ್, ಒಳಚರಂಡಿ ಕೆಲಸ ಮಾಡುವ ಹೊರಗುತ್ತಿಗೆ ನೌಕರರು ಧರಣಿ ನಡೆಸಿದರು.

ನಗರ ಸ್ಥಳೀಯ ಸಂಸ್ಥೆಯಲ್ಲಿ ಹೊರಗುತ್ತಿಗೆಯಡಿ ಸೇವೆ ಸಲ್ಲಿಸುತ್ತಿರುವ ನೌಕರರ ಬೇಡಿಕೆಗೆ ಸರ್ಕಾರ ಸ್ಪಂದಿಸುತ್ತಿಲ್ಲ. ನೌಕರರನ್ನು ನೇರಪಾವತಿಗೆ ತರುವುದರಿಂದ ಸರ್ಕಾರಕ್ಕೆ ಜಿಎಸ್‌ಟಿ ಉಳಿತಾಯದ ಜತೆಗೆ ನೌಕರರಿಗೆ ಸೇವಾಭದ್ರತೆ ದೊರಕಲಿದೆ. ಮುಖ್ಯವಾಗಿ ಏಜೆನ್ಸಿಗಳ ಕಿರುಕುಳ ನಿಲ್ಲಲಿದೆ. 2022ರಲ್ಲಿ ಅಂದಿನ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಮಿಕರನ್ನು ನೇರಪಾವತಿಗೆ ತರಲು ತೀರ್ಮಾನವು ಆಗಿದೆ. ಆದರೆ ಅಧಿಕಾರಿಗಳ ತಾರತಮ್ಯ ನೀತಿಯಿಂದಾಗಿ ಅನ್ಯಾಯ ಮುಂದುವರೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಕಷ್ಟ ಭತ್ಯೆಯನ್ನು ಖಾಯಂ ಪೌರಕಾರ್ಮಿಕರಿಗಷ್ಟೇ ನೀಡಿರುವುದು ತಾರತಮ್ಯದ ಪರಮಾವಧಿಯಾಗಿದೆ. ನಗರಾಭಿವೃದ್ಧಿ ಇಲಾಖೆಯು ಕಾರ್ಮಿಕ ವಿರೋಧಿ ಧೋರಣೆಯನ್ನು ಅನುಸರಿಸುತ್ತಿದೆ. ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಹೊರಗುತ್ತಿಗೆ ನೌಕರರನ್ನು ನೇರಪಾವತಿಗೆ ತರಲು ಬಜೆಟ್‌ನಲ್ಲಿ ಘೋಷಣೆ ಮಾಡಬೇಕು. ಪೌರಾಡಳಿತ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ಮಾಡಿ ಅಗತ್ಯಕ್ಕೆ ಅನುಗುಣವಾಗಿ ಪೌರಚಾಲಕ ಹುದ್ದೆಗಳನ್ನು ಸೃಷ್ಟಿಸಬೇಕು. ಸಂಕಷ್ಟ ಭತ್ಯೆಯನ್ನು ನೇರಪಾವತಿ ಹಾಗೂ ಗುತ್ತಿಗೆ ಪೌರಕಾರ್ಮಿಕರಿಗೂ ವಿಸ್ತರಿಸಬೇಕು. ಬಾಕಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿ ಮಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ನಾಗರಾಜ್, ಎಂ.ಮಹದೇವು, ಎಂ.ಗಣೇಶ, ರಾಜೇಶ್, ಓಬಯ್ಯ, ಪೌರಕಾರ್ಮಿಕ ಚಾಲಕರ ಸಂಘದ ಚೆನ್ನೇಶ್, ದಿನೇಶ್, ರೂಪೇಶ್, ನವೀನ್, ನಂದೀಶ್, ದೀಪು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net