

ಮೈಸೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ‘ಭಾರತದ ಇವಿಎಂ ಮತದಾನ ಮತ್ತು ರಾಜಕೀಯ ಪಕ್ಷಗಳು’ ವಿಷಯದ ಕುರಿತು ಅವಲೋಕನ ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ಮಾತನಾಡಿ, ಮತಯಂತ್ರವನ್ನು ಯಾರು ಬೇಕಾದರೂ ಹ್ಯಾಕ್ ಮಾಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸುವ ವ್ಯವಸ್ಥೆಯನ್ನು ಕೇಂದ್ರ ಚುನಾವಣಾ ಆಯೋಗ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ಸಹಿ ಸಂಗ್ರಹಿಸಿ ಆಯೋಗಕ್ಕೆ ಕಳುಹಿಸಲಾಗುವುದು ಎಂದು ಹೇಳಿದರು.
ವಿಶ್ರಾಂತ ಕುಲಪತಿ ಪ್ರೊ. ಮಹದೇವ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ನಡುವೆಯೂ ಹಲವಾರು ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಿರುವುದು ಶ್ಲಾಘನೀಯ ಎಂದರು.
ಮತಯಂತ್ರಗಳು ಹ್ಯಾಕ್ ಆಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಆದರೆ, ಕೇಂದ್ರ ಚುನಾವಣಾ ಆಯೋಗ ಈ ಆರೋಪ ವನ್ನು ನಿರಾಕರಿಸಿದೆ. ಒಂದುವೇಳೆ ಮತಯಂತ್ರಗಳು ಹ್ಯಾಕ್ ಆಗಿದ್ದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಹೇಗೆ ಬಂತು ಎಂಬ ಪ್ರಶ್ನೆ ಎದುರಾಗುತ್ತದೆ. ಇದು ತುಂಬಾ ಸಂಕೀರ್ಣವಾದ ವಿಚಾರವಾಗಿದ್ದು, ಈ ಬಗ್ಗೆ ತಜ್ಞರು ಬೆಳಕು ಚೆಲ್ಲಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಡಿಸಿಸಿ ರೀಸರ್ಚ್ ವಿಭಾಗದ ಅಧ್ಯಕ್ಷ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಕೆಪಿಸಿಸಿ ವಕ್ತಾರ ಅನಿಲ್ ಕುಮಾರ್ ಹಾಗೂ ಇತರು ಇದ್ದರು.