

ಮಡಿಕೇರಿ: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿ.೧ ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ೨೦೨೪-೨೫ನೇ ಸಾಲಿನ ಕನಿ?್ಠ ಬೆಂಬಲ ಬೆಲೆ ಯೋಜನೆಯಡಿ ಗುರುವಾರ ನಡೆದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಆದೇಶದಂತೆ ೨೦೨೪-೨೫ನೇ ಸಾಲಿಗೆ ರೈತರಿಂದ ಕನಿ?್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದೆ. ಡಿ.೧ ರಿಂದ ಆರಂಭವಾಗಲಿದ್ದು, ಈ ಅವಕಾಶವನ್ನು ರೈತರು ಬಳಸಿಕೊಳ್ಳುವಂತೆ ಮನವಿ ಮಾಡಿದರು.
ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯಲಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿ.೧ ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ೨೩೦೦ ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್‌ಗೆ ೪೨೯೦ ರೂ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ ೫ ಕಡೆಗಳಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಹಾಗೂ ವಿರಾಜಪೇಟೆ ಪಟ್ಟಣದಲ್ಲಿ ಖರೀದಿ ಮಾಡಲಾಗುತ್ತಿದೆ. ರೈತರು ಸಂಬಂಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಬಹುದಾಗಿದೆ. ಬೇಡಿಕೆ ಇದ್ದಲ್ಲಿ ಅಗ್ಯತ್ಯಕ್ಕೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್‌ಗಳನ್ನು ನಿಯೋಜಿಸಲು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಿದರು. ರೈತರ ನೋಂದಣಿ ತಾಂತ್ರಿಕ ತೊಂದರೆಗಳು ಕಂಡು ಬಂದಲ್ಲಿ ಕೂಡಲೆ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಖರೀದಿ ಏಜೆನ್ಸಿಯವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ ಶರತ್ ಮಾತನಾಡಿ, ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು.
ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್‌ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ತಿಳಿಸಿದರು.
ನೋಂದಣಿ ಕೇಂದ್ರದಲ್ಲಿ ಸಿಬ್ಬಂದಿ ಮತ್ತು ಡೇಟಾ ಎಂಟ್ರಿ ಆಪರೇಟರ್‌ಗಳ ನೇಮಕ, ಕಂಪ್ಯೂಟರ್, ಇಂಟರ್‌ನೆಟ್ ಸೌಲಭ್ಯ, ವಿದ್ಯುತ್ ಸಂಪರ್ಕ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಸಲಹೆ ಮಾಡಿದರು.
ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್, ತೂಕ ಮತ್ತು ಅಳತೆ ವಿಭಾಗದ ಸಹಾಯಕ ನಿಯಂತ್ರಕ ಸರಳಾ ನಾಯರ್, ಕರ್ನಾಟಕ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ಸೋಮಯ್ಯ, ಕರ್ನಾಟಕ ಕೃಷಿ ಉತ್ಪನ್ನ ಮಾರಾಟ ಸಮಿತಿಯ ಫರ್ನಾಂಡೀಸ್, ಉಗ್ರಾಣ ನಿಗಮದ ವ್ಯವಸ್ಥಾಪಕ ನಾಗ ನಾಯಕ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಯಶೋಧ, ಆಹಾರ ಇಲಾಖೆ ನಿರೀಕ್ಷಕರಾದ ಸ್ವಾತಿ, ನಿಶಾನ್, ವೀಣಾ, ಯಶಸ್ವಿನಿ, ಕಿರಣ್, ನಾಗೇಂದ್ರ ಇತರರು ಇದ್ದರು.