

ಬೇಲೂರು: ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿಯನ್ನು ಬಂಧಿಸಿ ಗಡಿಪಾರು ಮಾಡಬೇಕು. ಇದಕ್ಕೆ ಕುಮ್ಮಕ್ಕು ನೀಡಿದ ರಾಜ್ಯಸಭೆ ಸದಸ್ಯ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಬಿಜೆಪಿ ಮಂಡಲ ಹಾಗೂ ಯುವ ಮೋರ್ಚಾದಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ಮಂಡಲದ ಅಧ್ಯಕ್ಷ ಅಡಗೂರು ಆನಂದ್ ಮಾತನಾಡಿ, ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾದ ನಾಸೀರ್ ಹುಸೇನ್ ಗೆಲುವಿನ ಸಂಭ್ರಮ ಆಚರಿಸುವ ಸಂದರ್ಭ ಅವರ ಬೆಂಬಲಿಗರು ದೇಶ ದ್ರೋಹದ ಕೆಲಸ ಮಾಡಿದ್ದು, ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗುವ ಮೂಲಕ ಅವರ ಕ್ರೂರ ಮನಸ್ಥಿತಿಯನ್ನು ಮತ್ತೊಮ್ಮೆ ಬಿಂಬಿಸಿದ್ದಾರೆ. ಇಂತಹ ವ್ಯಕ್ತಿಯನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಬೇಕು. ಅಲ್ಲದೇ, ಇಂತಹ ವ್ಯಕ್ತಿಗಳನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಜತೆಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಿನಾಮೆ ನೀಡಬೇಕು. ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ದೇಶದ ಜನತೆಯ ಮುಂದೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್ ಮಾತನಾಡಿ, ಪಾಕಿಸ್ತಾನದ ಪರ ಜಿಂದಾಬಾದ್ ಎಂಬ ಘೋಷಣೆ ಕೂಗಿದ ದೇಶ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲಬೇಕು. ವಿಧಾನಸೌಧದಲ್ಲೇ ಈ ರೀತಿಯಾದರೆ ಕಾಂಗ್ರೆಸ್ ಪಕ್ಷದಲ್ಲಿ ಇನ್ನೆಷ್ಟು ದೇಶ ಸುಡುವ ವಿಷಜಂತುಗಳನ್ನಿಟ್ಟುಕೊಂಡಿದ್ದಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡಲಿ ಎಂದರು.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸುಮನ್ ಮಾತನಾಡಿ, ಇಂತಹ ಕೆಟ್ಟ ಜಿಹಾದಿಗಳನ್ನು ಹುಟ್ಟು ಹಾಕುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು. ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದರು. ನಂತರ ತಹಸೀಲ್ದಾರ್ ಎಂ.ಮಮತಾಗೆ ಮನವಿ ಸಲ್ಲಿಸಿದರು.
ತಾಪಂ ಮಾಜಿ ಸದಸ್ಯ ಶಶಿಕುಮಾರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಗಣೇಶ್, ಗ್ರಾಪಂ ಸದಸ್ಯೆ ಸುಜಾತಾ, ಮುಖಂಡರಾದ ಅನಿಲ್‌ಗೌಡ, ಆನಂದ್, ವಿನಯ್, ಚಂದ್ರೇಗೌಡ, ರವಿಕುಮಾರ್, ಮೋಹನ್, ಚಂದು ಇತರರಿದ್ದರು.