ಪಾಳ್ಯ ಸುತ್ತಲ ಗ್ರಾಮಸ್ಥರ ಪ್ರತಿಭಟನೆ

IMG-20240724-WA0167
Published on

ಆಲೂರು: ಪಾಳ್ಯ ಹೋಬಳಿ ಕೇಂದ್ರದಲ್ಲಿ ವಿದ್ಯುತ್ ವಿತರಣಾ ಕೇಂದ್ರ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಹೋಬಳಿ ವ್ಯಾಪ್ತಿಯ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ರೈತರು, ಸಂಘ ಸಂಸ್ಥೆಗಳಿಂದ ಬುಧವಾರ ಪ್ರತಿಭಟನೆ ನಡೆಯಿತು.


ಈ ಭಾಗದಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಬೇಸಿಗೆಯಲ್ಲಿ ಒಂದು ರೀತಿ ಸಮಸ್ಯೆಯಾದರೆ, ಮಳೆಗಾಲದಲ್ಲಿ ಮತ್ತೊಂದು ಸಮಸ್ಯೆ. ತಿಂಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸಮರ್ಪಕ ವಿದ್ಯುತ್ ಸರಬರಾಜು ಇಲ್ಲದೆ ತೊಂದರೆಯಾಗುತ್ತಿದೆ. ಹಲವು ಬಾರಿ ಸೆಸ್ಕ್‌ಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಆದ್ದರಿಂದ ಕಾರ್ಯನಿರ್ವಾಹಕ ಇಂಜಿನಿಯರ್ ವಾರದೊಳಗೆ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಬೇಕು. ಪಾಳ್ಯ ಹೋಬಳಿ ಕೇಂದ್ರದಲ್ಲಿ ಪ್ರತ್ಯೇಕ ವಿದ್ಯುತ್ ವಿತರಣಾ ಕೇಂದ್ರಕ್ಕೆ ಶೀಘ್ರ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್.ಮಂಜೇಗೌಡ ಮಾತನಾಡಿ, ಪ್ರತ್ಯೇಕ ಕೇಂದ್ರ ಆರಂಭಿಸುವುದರಿಂದ ಸುಮಾರು 25ಕ್ಕೂ ಹೆಚ್ಚು ಹಳ್ಳಿಗಳಿಗೆ ಅನುಕೂಲವಾಗಲಿದೆ. ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದೆ ಉಡಾಫೆ ಉತ್ತರ ಹೇಳುತ್ತಾ ಬಂದಿದ್ದಾರೆ. ಶೀಘ್ರ ರೈತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು.


ನಂತರ ಸೆಸ್ಕ್ ಎಇಇ ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಸಿ.ವಿ.ಲಿಂಗರಾಜು, ಹಾಸನ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಪಿ.ಎಲ್.ಲಿಂಗರಾಜು, ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಹನುಮಂತೇಗೌಡ, ಕರವೇ ಜಿಲ್ಲಾ ಕಾರ್ಯದರ್ಶಿ ರಘು ಪಾಳ್ಯ, ರೈತ ಮುಖಂಡರಾದ ಭರತ್, ಕೃಷ್ಣಮೂರ್ತಿ, ದೇವರಾಜ್, ಕೆ.ಎಂ. ಪುರುಷೋತ್ತಮ್, ನಿಂಗರಾಜು, ಪಾಳ್ಯ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net