ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಬಿಗ್​ ಟ್ವಿಸ್ಟ್! ಯಥಾಸ್ಥಿತಿ ಕಾಯ್ದುಕೊಳ್ಳಲು ಹೈಕೋರ್ಟ್​ ಆದೇಶ

HighCourt 20 Feb 20
Published on

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯದ ಉಗ್ರ ಹೋರಾಟಕ್ಕೆ ಮಣಿದ ರಾಜ್ಯ ಸರ್ಕಾರ ಕಳೆದ ವಾರ ಚಳಿಗಾಲದ ಅಧಿವೇಶನದಲ್ಲಿ ಲಿಂಗಾಯತರಿಗೆ 2ಡಿ ಪ್ರವರ್ಗ ಸೃಷ್ಟಿಸಿ ಮೀಸಲಾತಿ ಘೋಷಿಸಿತ್ತು. ಆದರೆ, ಇದಕ್ಕೆ ತಡೆ ನೀಡಿರುವ ಹೈಕೋರ್ಟ್​, ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಧ್ಯಂತರ ಆದೇಶ ನೀಡಿದೆ!

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು ನೀಡುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು ಕಾನೂನುಬಾಹಿರವೆಂದು ಆದೇಶಿಸುವಂತೆ ಕೋರಿ ಬೆಂಗಳೂರಿನ ಡಿ.ಜಿ. ರಾಘವೇಂದ್ರ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಅರ್ಜಿದಾರ ಪರ ವಕೀಲ ಎಚ್.ವಿ. ಮಂಜುನಾಥ್, ಪಂಚಮಸಾಲಿ ಸಮುದಾಯಕ್ಕೆ ಸಂಬಂಧಿಸಿದ ಮಧ್ಯಂತರ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಡಿ.27ರಂದು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಈ ಮಧ್ಯೆ ಲಿಂಗಾಯತ ಸಮುದಾಯಕ್ಕೆ 2ಡಿ ಹಾಗೂ ವಕ್ಕಲಿಗ ಸಮುದಾಯಕ್ಕೆ 2ಸಿ ಪ್ರವರ್ಗ ಸೃಷ್ಟಿಸಿ ಬೆಳಗಾವಿ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಸಲು ಸರ್ಕಾರ ಕಾಲಾವಕಾಶ ಕೋರಿತು. ಅದಕ್ಕೆ ನ್ಯಾಯಪೀಠ, ವರದಿ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಿ, ಅಲ್ಲಿಯವರೆಗೂ ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕೆಂದು ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net