

ಪಾಂಡವಪುರ: ಮೇಲುಕೋಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಚುನಾವಣೆ ಫಲಿತಾಂಶ ಪ್ರಕಟಕ್ಕೆ ಸಂಬಂಧಿಸಿದಂತೆ ಕೆಲ ಅಧಿಕಾರಿಗಳು ಏಕಪಕ್ಷೀಯವಾಗಿ ಮತ್ತು ಉದ್ಧ್ದಟತನದಿಂದ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ತಾಲೂಕು ಕಚೇರಿ ಮುತ್ತಿಗೆ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ನಾಗಭೂಷಣ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಶಾಸಕ ಸಿ.ಎಸ್.ಪುಟ್ಟರಾಜು ಮಾತನಾಡಿ, ಕಳೆದ ತಿಂಗಳು ನಡೆದ ಮೇಲುಕೋಟೆ ಡೇರಿ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತರು ಡೇರಿ ಅಧಿಕಾರ ಹಿಡಿಯಬೇಕಿತ್ತು. ಆದರೆ ಕೆಲವರು ಫಲಿತಾಂಶ ಪ್ರಕಟವಾಗದಂತೆ ತಡೆ ಹಿಡಿದಿದ್ದರು. ಈಗ ಅರ್ಹ ಮತದಾರರ ಮತವನ್ನು ಮಾತ್ರ ಪರಿಗಣಿಸಿ, ಅದರ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವಂತೆ ಹೈಕೋರ್ಟ್ ಆದೇಶ ನೀಡಿದೆ. ಆದರೆ, ಆದೇಶ ಪ್ರತಿ ಇನ್ನೂ ಸಿಕ್ಕಿಲ್ಲ. ಅದಕ್ಕೂ ಮೊದಲೇ ಚುನಾವಣೆ ಫಲಿತಾಂಶ ಪ್ರಕಟಣೆಗೆ ಸಹಕಾರ ಇಲಾಖೆ ಸಹಾಯಕ ನಿಬಂಧಕರು ಮುಂದಾಗಿರುವುದು ಸರಿಯಲ್ಲ. ನ್ಯಾಯಾಲಯದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ, ನಾವು ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುತ್ತಿದ್ದೇವೆ. ಅದಕ್ಕೂ ಮೊದಲೇ ತರಾತುರಿಯಲ್ಲಿ ಫಲಿತಾಂಶ ಪ್ರಕಟಿಸುವ ಜರೂರು ತೋರುತ್ತಿರುವುದರ ಹಿಂದೆ ಕೆಲ ಅಧಿಕಾರಿಗಳ ಕೈವಾಡವಿದೆ ಎಂದು ಆರೋಪಿಸಿದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಏಕ ಪಕ್ಷೀಯವಾಗಿ ನಡೆದುಕೊಂಡು ಗೊಂದಲ ಸೃಷ್ಟಿ ಮಾಡಬಾರದು. ಇಂದು ತಾತ್ಕಾಲಿಕವಾಗಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸುತ್ತಿದ್ದೇವೆ. ತಹಸೀಲ್ದಾರ್ ಅವರು ಜವಾಬ್ದಾರಿ ಹೊತ್ತು ಸರಿಪಡಿಸದಿದ್ದರೆ ಮುಂದಿನ ಎಲ್ಲ ಅನಾಹುತಗಳಿಗೆ ಅಧಿಕಾರಿಗಳೇ ನೇರ ಹೊಣೆಗಾರರಾಗುತ್ತಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಕೂಡ ಕ್ರಮದ ಭರವಸೆ ನೀಡಿದ್ದು, ನ್ಯಾಯಾಲಯದಲ್ಲಿ ಕಾನೂನು ಹೋರಾಟ ಮುಂದುವರಿಸಲಾಗುವುದು ಎಂದರು.
ಬಳಿಕ ತಹಸೀಲ್ದಾರ್ ಜಿ.ಎಸ್.ಶ್ರೇಯಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಟಿಎಪಿಸಿಎಂಎಸ್ ಅಧ್ಯಕ್ಷ ಡಿ.ಶ್ರೀನಿವಾಸ್, ನಿರ್ದೇಶಕ ಕಣಿವೆ ಯೋಗೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಗುರುಸ್ವಾಮಿ, ಪುರಸಭೆ ಸದಸ್ಯರಾದ ಆರ್.ಸೋಮಶೇಖರ್, ಮಹದೇವು, ಜೆಡಿಎಸ್ ಮುಖಂಡರಾದ ಅಲ್ಪಹಳ್ಳಿ ಗೋವಿಂದಯ್ಯ, ಕನಗನಮರಡಿ ಬೊಮ್ಮರಾಜು, ಅರಕುಪ್ಪೆ ಪ್ರಶಾಂತ್, ಚಂದ್ರು, ಇತರರು ಇದ್ದರು.