ಕವಿಶಿಷ್ಯ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಕಾರ್ಯಕ್ರಮ

panje
Published on

ಮಡಿಕೇರಿ:

ಕವಿಶಿಷ್ಯ ಪಂಜೆ ಮಂಗೇಶರಾಯರ 150ನೇ ವರ್ಷಾಚರಣೆ ಕಾರ್ಯಕ್ರಮ ಫೆ.20ರಂದು ಆಯೋಜಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಘಟಕದ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಮತ್ತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಡಿಕೇರಿ ಜೂನಿಯರ್ ಕಾಲೇಜು ಆವರಣದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಸಾಪ ಅಧ್ಯಕ್ಷ ಡಾ. ಮಹೇಶ್ ಜೋಶಿ ಬೆಳಗ್ಗೆ 10 ಗಂಟೆಗೆ ಉದ್ಘಾಟನೆ ನೆರವೇರಿಸಲಿದ್ದಾರೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜಲಜಾ ಶೇಖರ್ ಬರೆದಿರುವ ಅಗ್ನಿಕುಂಡ ಪುಸ್ತಕವನ್ನು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಮತ್ತು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಬಿಡುಗಡೆ ಮಾಡಲಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನ್ಲಿ ಅಲ್ವಾರೆಸ್ ಸೇರಿದಂತೆ ಗಣ್ಯರು ಪಾಲ್ಗೊಳ್ಳುವರು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಧ್ಯಾಹ್ನ 12.30ರಿಂದ ವಿಚಾರಗೋಷ್ಠಿಗಳು ನಡೆಯಲಿದ್ದು, ರಾಜ್ಯದ ಹೆಸರಾಂತ ಸಂಪನ್ಮೂಲ ವ್ಯಕ್ತಿಗಳು ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ. 2.30ಕ್ಕೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆಯಲ್ಲಿ ಸಮಾರೋಪ ಕಾರ್ಯಕ್ರಮ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ತು ಕೊಡಗು ಘಟಕದ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಸಮಾರೋಪ ಭಾಷಣ ಮಾಡಲಿದ್ದಾರೆ. ಸಂಜೆ ನಾಲ್ಕು ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪಂಜೆ ಮಂಗೇಶ ರಾಯರ ಗೀತೆಗಳನ್ನು ನೃತ್ಯದ ಮೂಲಕ ಪ್ರಸ್ತುತಪಡಿಸಲಾಗುತ್ತದೆ. ಅರೆಭಾಷೆಯ ನೃತ್ಯ ರೂಪಕವೂ ಇರಲಿದೆ.

ಪಂಜೆ ಮಂಗೇಶ ರಾಯರು ಮಡಿಕೇರಿ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಥಮ ಭಾರತೀಯ ಕನ್ನಡಿಗ ಮುಖ್ಯೋಪಾಧ್ಯಾರಾಗಿ ಸೇವೆ ಸಲ್ಲಿಸಿದವರು. ಕೊಡಗಿನ ನಾಡ ಗೀತೆ ಹೆಗ್ಗಳಿಕೆಯ 'ಎಲ್ಲಿ ಭೂರಮೆ ದೇವ ಸನ್ನಿಧಿ ಗೀತೆ ಬಯಸಿ ಭಿಮ್ಮನೆ ಬಂದಳೋ..' ಹಾಡು ರಚಿಸಿದವರು. ಇವರ ಜನ್ಮದಿನ ಆಚರಿಸಬೇಕಾಗಿದ್ದು ಎಲ್ಲಾ ಕನ್ನಡಿಗರ ಕರ್ತವ್ಯ. ಅವರ ಸಾಹಿತ್ಯ ಎಲ್ಲರೂ ಓದುವಂತಾಗಬೇಕು. 125ನೇ ಜನ್ಮ ದಿನ ಕಾರ್ಯಕ್ರಮ ಮಡಿಕೇರಿಯಲ್ಲಿ ನಡೆಸಲಾಗಿತ್ತು. ಕೂಡಿಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದಲ್ಲಿ ಸಮಗ್ರ ಬರಹಗಳ ಸಂಕಲನ ಪ್ರಕಟಿಸಲಾಗಿತ್ತು ಎಂದರು.

ಕೊಡಗು ಕಸಾಪ ಗೌರವ ಕಾರ್ಯದರ್ಶಿ ಎಸ್.ಐ ಮುನೀರ್ ಅಹ್ಮದ್, ಪುದಿಯನೆರವನ ರೇವತಿ ರಮೇಶ್, ಮಡಿಕೇರಿ ತಾಲೂಕು ಕಸಾಪ ಅಧ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕಾರ್ಯಕಾರಿ ಸಮಿತಿ ಸದಸ್ಯ ಪ್ರೇಮಕುಮಾರ್ ಸುದ್ದಿಗೋಷ್ಠಿಯಲ್ಲಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net