ಪಾಲಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಿ

4 NRGL 1
Published on

ನರೇಗಲ್ಲ: ಸರ್ಕಾರ ಶಿಕ್ಷಣಕ್ಕೆ ಸಾಕಷ್ಟು ಅನುಕೂಲ ಒದಗಿಸುತ್ತಿದೆ. ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯಗೊಳಿಸಿರುವ ಸರ್ಕಾರ ಅದಕ್ಕೆ ಪೂರಕವಾಗಿ ಬೇಕಾದ ಕಟ್ಟಡ, ಇನ್ನಿತರ ಭೌತಿಕ ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಬೇಕು ಎಂದು ಕುರುಡಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವನಗೌಡ ಸಿದ್ದನಗೌಡ ಹೇಳಿದರು.

ನರೇಗಲ್ಲ ಹೋಬಳಿಯ ಕುರುಡಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರೆಬೇಲೇರಿ ಗ್ರಾಮದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ವಣವಾದ ಪ್ರಾಥಮಿಕ ಶಾಲೆಯ ನೂತನ ಕೊಠಡಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಗೆ ವಿದ್ಯಾರ್ಥಿಗಳ ದಾಖಲಾತಿಯ ಜತೆಗೆ ಹಾಜರಾತಿಯೂ ಮುಖ್ಯ ಎಂಬುದನ್ನು ಮನಗಂಡಿರುವ ಸರ್ಕಾರ ಅದಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕ ಮತ್ತು ಬಿಸಿಯೂಟದ ವ್ಯವಸ್ಥೆ ಮಾಡಿದೆ. ಈ ಎಲ್ಲ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕು ಎಂದರು.

ಬಿಇಒ ಫಣಿಬಂದ ಮಾತನಾಡಿ, ಪ್ರತಿಭೆ ಎನ್ನುವುದು ಕೆಲವರಿಗಷ್ಟೇ ಸೀಮಿತವಾಗಿಲ್ಲ. ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪಟ್ಟಣದ ವಿದ್ಯಾರ್ಥಿಗಳಿಗಿಂತ ಪ್ರತಿಭೆಯಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ಇಲ್ಲಿಗೆ ಸಮೀಪದ ಕುರುಡಗಿ ಗ್ರಾಮದ ಡಾ. ಆರ್.ಸಿ. ಹಿರೇಮಠರು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳಾಗಿದ್ದುದೇ ಇದಕ್ಕೆ ಸಾಕ್ಷಿ ಎಂದರು.

ಎಸ್​ಡಿಎಂಸಿ ಅಧ್ಯಕ್ಷೆ ಭಾರತಿ ಗೊತ್ಗಿ, ಶರಣಪ್ಪ ಕುದರಿ, ರಮೇಶ ಕಡೇಮನಿ, ಗ್ರಾಮ ಪಂಚಾಯಿತಿ ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕರು-ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net