

ಪುತ್ತೂರು ಗ್ರಾಮಾಂತರ: ಸರ್ಕಾರಿ ಶಾಲೆಗಳು ಉಳಿಯಬೇಕಾದರೆ ಪಾಲಕರು ಮುತುವರ್ಜಿ ವಹಿಸಬೇಕು. ಅದರಲ್ಲೂ ಕೇರಳಕ್ಕೆ ತಾಗಿಕೊಂಡಿರುವ ಗಡಿಗ್ರಾಮದ ಶಾಲೆಗಳಲ್ಲಿ ಉಳಿಸುವಲ್ಲಿ ಎಲ್ಲರೂ ಹೆಚ್ಚಿನ ಆಸಕ್ತಿ ತೋರಬೇಕು. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ನೆಟ್ಟಣಿಗೆ ಮುಡ್ನೂರು ಗ್ರಾಮದ ಗೋಳಿತ್ತಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ವಿವೇಕ’ ಕೊಠಡಿಯನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.
ಇಂದು ಸರ್ಕಾರಿ ಶಾಲೆಗಳಲ್ಲಿ ಎಲ್ಲ ಸೌಲಭ್ಯಗಳಿವೆ. ಕೊಠಡಿಗಳ, ಶಿಕ್ಷಕರ ಕೊರತೆ ನೀಗಿಸಲಾಗಿದೆ. ಮಧ್ಯಾಹ್ನದ ಬಿಸಿಯೂಟದ ಜತೆಗೆ ಪೌಷ್ಠಿಕಾಂಶವಿರುವ ಆಹಾರವನ್ನು ಮಕ್ಕಳಿಗೆ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದ್ದು, ಈಗಾಗಲೇ ತಾಲೂಕಿನ ಎರಡು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಅನುಮತಿ ನೀಡಲಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವ ಮೂಲಕ ಶಾಲೆ ಉಳಿಸುವ ಕೆಲಸ ಮಾಡಬೇಕು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷೆ ಫೌಝಿಯಾ ಇಬ್ರಾಹಿಂ, ಗ್ರಾಪಂ ಸದಸ್ಯರಾದ ಶ್ರೀರಾಮ್ ಪಕ್ಕಳ ಕರ್ನೂರುಗುತ್ತು, ಇಬ್ರಾಹಿಂ ಪಳ್ಳತ್ತೂರು, ಎಸ್‌ಡಿಎಂಸಿ ಅಧ್ಯಕ್ಷ ಉಮ್ಮರ್ ಹಾಜಿ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ವಿದ್ಯಾ ಕುಮಾರಿ ಸ್ವಾಗತಿಸಿ, ಶಿಕ್ಷಕಿ ಶಾಹಿನಾ ವಂದಿಸಿದರು.