

ಮಂಡ್ಯ: ಪರಿಸರವನ್ನು ಮನುಷ್ಯರು ಜೀವನದ ಭಾಗವಾಗಿ ಅಳವಡಿಸಿಕೊಳ್ಳಬೇಕು. ಅಂತೆಯೇ ಮುಂದಿನ ಪೀಳಿಗೆಗೂ ಉತ್ತಮ ಪರಿಸರವನ್ನು ಉಳಿಸುವ ಕೆಲಸ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ತಿಳಿಸಿದರು.
ನಗರದ ಮೈಷುಗರ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕೌಶಲಾಭಿವೃದ್ಧಿ ಇಲಾಖೆ, ಮೈಸೂರು ಸಕ್ಕರೆ ಕಾರ್ಖಾನೆ, ವಲಯ ಅರಣ್ಯ ಅಧಿಕಾರಿಗಳ ಕಚೇರಿ ಪ್ರಾದೇಶಿಕ ಅರಣ್ಯ ವಿಭಾಗ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಸಸ್ಯೋತ್ಸವ ಉದ್ಘಾಟಿಸಿ ಮಾತನಾಡಿದರು.
ಪರಿಸರವನ್ನು ಉಳಿಸುವ ಕೆಲಸ ಈಗಿನಿಂದಲೇ ಪ್ರಾರಂಭಿಸಬೇಕಿದೆ. ಮಾನವನ ಮಿತಿಮೀರಿದ ಆಸೆಯಿಂದ ಅರಣ್ಯ ನಾಶವಾಗುತ್ತಿದ್ದು, ಜಲಮೂಲಗಳು ಬತ್ತಿಹೋಗುತ್ತಿವೆ. ಪರಿಸರದ ಉಳಿವಿಗೆ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಪ್ರತಿಯೊಬ್ಬರು ಇದಕ್ಕೆ ಕೈ ಜೋಡಿಸಬೇಕು ಎಂದು ಹೇಳಿದರು.
ಮಕ್ಕಳಿಗೆ ಬಾಲ್ಯದಿಂದಲೇ ಪರಿಸರದ ಬಗ್ಗೆ ಕಾಳಜಿ ಮೂಡಿಸಬೇಕು. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ನಿರ್ಮಿಸಿರುವ ಕೃಷ್ಣರಾಜಸಾಗರ ಡ್ಯಾಂ, ಮೈಷುಗರ್ ಕಾರ್ಖಾನೆ ಜಿಲ್ಲೆಯ ಜನರ ಅಭಿವೃದ್ಧಿಗೆ ಕಾರಣವಾಗಿವೆ. ರೈತರ ಬೆಳವಣಿಗೆಗೆ ಮೂಲ ಕಾರಣವಾಗಿರುವ ಮೈಷುಗರ್ ಕಾರ್ಖಾನೆಯನ್ನು ಪುನರ್ ಆರಂಭ ಮಾಡಲು ಸರ್ಕಾರ ಚಾಲನೆ ಕೊಟ್ಟಿದೆ ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಜಿಲ್ಲೆಯಲ್ಲಿ ಪ್ರಾಚೀನ ಸ್ಮಾರಕಗಳು ಹಾಗೂ ಹಲವು ಶಾಸನಗಳಿವೆ. ಚೋಳರು ಹಾಗೂ ಹೊಯ್ಸಳರು ನಿರ್ಮಿಸಿರುವ ಐತಿಹಾಸಿಕ, ಸಾಂಸ್ಕೃತಿಕ ಕುರುಹುಗಳಿವೆ. ಅವುಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕಿದೆ ಎಂದರು.
ಮೈಷುಗರ್ ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಅಪ್ಪಾ ಸಾಹೇಬ್, ಪ್ರಧಾನ ವ್ಯವಸ್ಥಾಪಕ ಎನ್.ಆರ್.ವೇಣುಗೋಪಾಲ್, ಪರಿಸರ ಅಧಿಕಾರಿ ಬಿ.ಪಿ.ಗೀತಾ, ಅರಣ್ಯಾಧಿಕಾರಿ ಶಂಕರೇಗೌಡ, ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತೆ ಬಿ.ಎಸ್.ಅನುಪಮಾ, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಅಧ್ಯಕ್ಷ ಮಂಗಲ ಎಂ.ಯೋಗೀಶ ಇತರರಿದ್ದರು. ಇದೇ ಸಂದರ್ಭದಲ್ಲಿ ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.