ವಾಹನ ನಿಲುಗಡೆಗೆ ಸೂಚನಾ ಫಲಕ

24HDK00003
ಎಚ್.ಡಿ.ಕೋಟೆ ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಮುಂಭಾಗದ ರಸ್ತೆಯ ಎರಡೂ ಬದಿಯಲ್ಲಿ ವಾಹನ ನಿಲುಗಡೆಗೆ ಪೊಲೀಸ್ ಇನ್‌ಸ್ಪೆಕ್ಟರ್ ಗಂಗಾಧರ್ ಸೂಚನಾ ಫಲಕ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಿದರು.
Published on

ಎಚ್.ಡಿ.ಕೋಟೆ: ಸುಗಮ ಸಂಚಾರಕ್ಕೆ ಅನುವು ಮಾಡಿಕೊಡವ ಉದ್ದೇಶದಿಂದ ಪಟ್ಟಣ ಪೊಲೀಸ್ ಠಾಣೆ ವತಿಯಿಂದ ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಮುಂಭಾಗದ ರಸ್ತೆಯ ಎರಡೂ ಭಾಗದಲ್ಲಿ ಸೋಮವಾರ ವಾಹನ ನಿಲುಗಡೆಗೆ ಸೂಚನಾ ಫಲಕ ಅಳವಡಿಸಲಾಯಿತು.

ಪೊಲೀಸ್ ಇನ್‌ಸ್ಪೆಕ್ಟರ್ ಗಂಗಾಧರ್ ನೇತೃತ್ವದಲ್ಲಿ ರಸ್ತೆಯ ಎರಡೂ ಬದಿಯಲ್ಲಿ ನಿಗದಿತ ದಿನದಂದು ವಾಹನ ಪಾರ್ಕಿಂಗ್ ಮಾಡಲು ಸೂಚನಾ ಫಲಕ ಅಳವಡಿಸಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡುವ ಕೆಲಸ ಮಾಡಿದರು.

ಪೊಲೀಸ್ ಇನ್‌ಸ್ಪೆಕ್ಟರ್ ಗಂಗಾಧರ್ ಮಾತನಾಡಿ, ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ತಾಲೂಕು ಆಡಳಿತ ಸೌಧಕ್ಕೆ ಹೋಗುವ ರಸ್ತೆಯ ಅಕ್ಕಪಕ್ಕದಲ್ಲಿ ದ್ವಿಚಕ್ರ ವಾಹನಗಳು ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆ ಆಗಿ ಮುಂದೆ ಹೋಗುವ ವಾಹನಗಳಿಗೆ ಹಾಗೂ ಸಾರ್ವಜನಿಕರಿಗೆ ತುಂಬ ತೊಂದರೆ ಆಗಿತ್ತು. ಈ ಬಗ್ಗೆ ಸಾರ್ವಜನಿಕರ ಮನವಿ ಮೇರೆಗೆ ಹಾಗೂ ಹಲವಾರು ಸಂದರ್ಭಗಳಲ್ಲಿ ಪೊಲೀಸ್ ಸಿಬ್ಬಂದಿ ಖುದ್ದಾಗಿ ಗಮನಿಸಿದ್ದರಿಂದ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡುವ ಉದ್ದೇಶದಿಂದ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

ಇದೇ ರೀತಿ ಪಟ್ಟಣದ ಹ್ಯಾಂಡ್‌ಪೋಸ್ಟ್ ವೃತ್ತದ ನಾಲ್ಕು ಕಡೆಗಳಲ್ಲಿ ಕೂಡ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವುದರಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ಅಲ್ಲಿಯೂ ಕೂಡ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು. ಅಲ್ಲಿಯೂ ಕೂಡ ರಸ್ತೆಯ ಎರಡೂ ಬದಿಯಲ್ಲಿ ಸೂಚನಾ ಫಲಕವನ್ನು ಅಳವಡಿಸಲಾಗುವುದು ಎಂದು ಹೇಳಿದರು.

ವಾರದಲ್ಲಿನ ನಿಗದಿತ ದಿನಗಳಂದು ನಿಗದಿಪಡಿಸಿದ ರಸ್ತೆ ಬದಿಗಳಲ್ಲಿ ವಾಹನಗಳ ಪಾರ್ಕಿಂಗ್ ಮಾಡಬೇಕು. ಇದರಿಂದ ಎಲ್ಲರಿಗೂ ಅನುಕೂಲ ಆಗಲಿದೆ. ತಪ್ಪಿದಲ್ಲಿ ಅಂತಹ ವಾಹನ ಸವಾರರಿಗೆ ದಂಡ ವಿಧಿಸಲಾಗುವುದು. ಹಾಗಾಗಿ ಸಾರ್ವಜನಿಕರು ಸಹಕರಿಸಬೇಕು ಎಂದು ಕೋರಿದರು.

ಸಬ್ ಇನ್‌ಸ್ಪೆಕ್ಟರ್‌ಗಳಾದ ಸುರೇಶ್ ನಾಯಕ, ಚಿಕ್ಕನಾಯಕ, ಗೌರಿಶಂಕರ್, ಸಿಬ್ಬಂದಿ ಯೋಗೇಶ್, ನಾಗರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net