

ಹೊಸಪೇಟೆ: ಪಕ್ಷ ಸಂಘಟನೆಗೆ ನಗರದ ಮಲ್ಲಿಗೆ ಸಭಾಂಗಣದಲ್ಲಿ ಜ.13 ರಂದು ಜಿಲ್ಲಾಮಟ್ಟದ ಜನಸೇವಕ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಸಚಿವ ಆನಂದ ಸಿಂಗ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಶೇ.60ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯಶಾಲಿಗಳಾಗಿದ್ದಾರೆ. ಜಿಲ್ಲೆಯಲ್ಲಿ 145 ಗ್ರಾಪಂಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವ ವಿಶ್ವಾಸವಿದೆ. ಸಮಾವೇಶದಲ್ಲಿ ಗ್ರಾಪಂ, ತಾಪಂ, ಜಿಪಂ ಸದಸ್ಯರು, ನಗರಸಭೆ ಮಾಜಿ ಸದಸ್ಯರು, ಶಾಸಕರು, ಸಂಸದರು ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ, ಬೃಹತ್ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿರಲಿದ್ದಾರೆ.
ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲು ನಿಗದಿ ನಂತರ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಸಂಖ್ಯೆ ಸ್ಪಷ್ಟವಾಗಲಿದೆ ಎಂದರು. ಬಿಜೆಪಿ ವಿಭಾಗದ ಪ್ರಭಾರ ಸಿದ್ದೇಶ ಯಾದವ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್, ಮಂಡಲ ಅಧ್ಯಕ್ಷ ಬಸವರಾಜ ನಾಲತ್ವಾಡ, ಪ್ರಧಾನ ಕಾರ್ಯದರ್ಶಿ ಜೀವರತ್ನಂ, ಮುಖಂಡರಾದ ಅನಿಲ್ ನಾಯ್ಡು, ಸಂದೀಪ್ ಸಿಂಗ್ ಇದ್ದರು.