ಕಾರ್ಯಕರ್ತರೇ ಅಭ್ಯರ್ಥಿ ಪರ ಮತಯಾಚಿಸಿ

11-GPT-1
Published on

ಗುಂಡ್ಲುಪೇಟೆ: ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಮತನೀಡಿ ಎಂದು ಶಾಸಕ ಎಚ್.ಎಂ.ಗಣೇಶಪ್ರಸಾದ್ ಮನವಿ ಮಾಡಿದರು.


ತಾಲೂಕಿನ ಕಬ್ಬಹಳ್ಳಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಬನ್ನಿತಾಳಪುರ, ಆಲತ್ತೂರು, ಬರಗಿ ಹಾಗೂ ಮೂಖಹಳ್ಳಿ ಗ್ರಾಮಗಳಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಪರ ಮತಯಾಚಿಸಿ ಮಾತನಾಡಿದರು. ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನೀಡಿದ್ದ ಎಲ್ಲ ಭರವಸೆಗಳನ್ನು ಈಡೇರಿಸಿದ್ದು ಜನಪರ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿದೆ. ಹಿಂದುಳಿದ ವರ್ಗಗಳಿಗೂ ನಿಗಮ, ಮಂಡಳಿಗಳಲ್ಲಿ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಅತ್ಯಧಿಕ ಮತ ನೀಡಿ ಗೆಲ್ಲಿಸಿದಂತೆ ಲೋಕಸಭಾ ಚುನಾವಣೆಯಲ್ಲಿಯೂ ಹೆಚ್ಚಿನ ಮತ ನೀಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದರು.


ಅಭ್ಯರ್ಥಿಯು 8 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡಬೇಕಾಗಿರುವುದರಿಂದ ಎಲ್ಲ ಕಡೆಗಳಿಗೂ ಹೋಗಿ ಮತಯಾಚನೆ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪ್ರತಿ ಗ್ರಾಮ ಕಾರ್ಯಕರ್ತರೇ ತಾವೇ ಅಭ್ಯರ್ಥಿಯ ಪರವಾಗಿ ಮತಯಾಚನೆ ಮಾಡಬೇಕು. ಏ.12ರಂದು ಕಳಲೆ ಗೇಟ್ ಬಳಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಹೇಳಿದರು.


ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಸ್.ಮಹೇಶ್ ಮಾತನಾಡಿ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳನ್ನು ಸಂಪೂರ್ಣ ನಿರ್ಲಕ್ಷಿಸಲಾಗಿತ್ತು. ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಅಗತ್ಯ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ ಎಂದರು.


ಟಿಎಪಿಸಿಎಂಎಸ್ ಅಧ್ಯಕ್ಷ ಆಲತ್ತೂರು ಜಯರಾಂ, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ, ತಾಪಂ ಮಾಜಿ ಅಧ್ಯಕ್ಷ ಎಚ್.ಎನ್.ಬಸವರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net