

ರಾಯಚೂರು: ವಸತಿ ನಿಲಯಗಳ್ಲಲಿ ಅಡುಗೆ ಸಿಬ್ಬಂದಿ ಮತ್ತು ಡಿ ಗ್ರೂಪ್ ನೌಕರರು ಶುಚಿತ್ವದ ಬಗ್ಗೆ ಹೆಚ್ಚಿನ ಗಮನ ಹರಿಸುವ ಮೂಲಕ ವಿದ್ಯಾರ್ಥಿಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಡಿಎಚ್‌ಒ ಡಾ.ಸುರೇಂದ್ರಬಾಬು ಹೇಳಿದರು.
ಸ್ಥಳೀಯ ವಾಲ್ಮೀಕಿ ಭವನದಲ್ಲಿ ಜಿಲ್ಲಾಡಳಿತದಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಾಯಂ ಮತ್ತು ಹೊರಗುತ್ತಿಗೆ ಡಿ ಗ್ರೂಪ್ ಸಿಬ್ಬಂದಿಗೆ ಅಡುಗೆ ತಯಾರಿಸುವ ಮತ್ತು ಸ್ವಚ್ಛತೆ ಕಾಪಾಡುವ ಕುರಿತು ಬುಧವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಚತೆ ಕಾಪಾಡುವುದು ಅತ್ಯಂತ ಪ್ರಮುಖವಾಗಿದೆ. ಸ್ವಚ್ಛ, ಶುಚಿಯಾದ ಮತ್ತು ಬಿಸಿ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಿದಲ್ಲಿ ಅವರ ಆರೋಗ್ಯ ಉತ್ತಮವಾಗಿರುತ್ತದೆ. ಅಡುಗೆ ಮತ್ತು ಡಿ ಗ್ರೂಪ್ ನೌಕರರು ಮೊದಲು ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಂಡು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ರಾಜೇಂದ್ರ ಜಲ್ದಾರ್ ಮಾತನಾಡಿ, ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿ ಅಡುಗೆ ಮಾಡುವಾಗ ಅನುಸರಿಸಬೇಕಾದ ಮುನ್ನೆಚ್ಚರಿಕೆ ಮತ್ತು ಸ್ವಚ್ಛತೆ ಕುರಿತು ಕಾರ್ಯಾಗಾರದಲ್ಲಿ ನೀಡಲಾಗುವ ಸಲಹೆ, ಸೂಚನೆಗಳನ್ನು ಅರಿತುಕೊಂಡು ಅದನ್ನು ಕಾರ್ಯರೂಪಕ್ಕೆ ತರಬೇಕು ಎಂದು ಹೇಳಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಬಿ.ಕಲ್ಲೇಶ ಮಾತನಾಡಿ, ವಿದ್ಯಾರ್ಥಿಗಳಿಗೆ ಅಡುಗೆ ಮಾಡಿ ಬಡಿಸುವುದು ಅತ್ಯಂತ ಜವಾಬ್ದಾರಿಯುತ ಕೆಲಸವಾಗಿದ್ದು, ಈ ನಿಟ್ಟಿನಲ್ಲಿ ಸಿಬ್ಬಂದಿಗಳು ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡಬೇಕು ಎಂದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಅಡುಗೆ ಸಿಬ್ಬಂದಿಯನ್ನು ಸನ್ಮಾನಿಸಿ, ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಅಕ್ಷರ ದಾಸೋಹ ಜಿಲ್ಲಾ ಅಕಾರಿ ಈರಣ್ಣ ಕೊಸಗಿ, ಅಗ್ನಿಶಾಮಕ ದಳದ ಅಕಾರಿ ಖಾಸೀಂ ಸಾಬ್, ಇಲಾಖೆ ಅಕಾರಿಗಳಾದ ವಿಜಯಲಕ್ಷ್ಮಿ, ರುಕ್ಮಿಣಿ ಬಾಯಿ, ಮಂಜುಳಾ ಉಪಸ್ಥಿತರಿದ್ದರು.