ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ: ಬಸವರಾಜ ಬೊಮ್ಮಾಯಿ

MDK23
Published on

ಮಡಿಕೇರಿ: ಮುಂದಿನ ೧೦ ದಿನಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದ್ದು, ಭೂಕುಸಿತ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ನಿರ್ದೇಶನ ನೀಡಿದರು.


ಜಿಲ್ಲಾಧಿಕಾರಿಗಳು, ಜಿ.ಪಂ.ಸಿಇಒ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಜತೆ ಮಂಗಳವಾರ ಆಯೋಜಿಸಿದ್ದ ವಿಡಿಯೋ ಸಂವಾದದಲ್ಲಿ ಮಾಹಿತಿ ಪಡೆದು ಮಾತನಾಡಿದರು.


ಮುಂದಿನ ಹತ್ತು ದಿನಗಳಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಈ ಸಂಬಂಧ ಸೂಕ್ಷ್ಮ ಪ್ರದೇಶದಲ್ಲಿನ ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸುವಂತಾಗಬೇಕು. ಮನೆ ಹಾನಿಗೆ ಸಂಬಂಧಿಸಿದಂತೆ ಕೂಡಲೇ ಪರಿಹಾರ ವಿತರಿಸಬೇಕು. ಸಂತ್ರಸ್ತರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಗಮನಹರಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.


ಈಗಾಗಲೇ ಕೈಗೊಂಡಿರುವ ವಿಶೇಷ ಕಾರ್ಯಪಡೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳ ಕಾರ್ಯನಿರ್ವಹಣೆ, ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವುದು ಮತ್ತಿತರವನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.


ಜಿಲ್ಲಾಡಳಿತ ಭವನ ಬಳಿಯ ತಡೆಗೋಡೆ ಸಂಬಂಧಿಸಿದಂತೆ ಮಾಹಿತಿ ಪಡೆದ ಸಂದರ್ಭ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ತಡೆಗೋಡೆಗೆ ಸದ್ಯ ಮರಳು ಮೂಟೆಗಳನ್ನು ಅಳವಡಿಸಲಾಗಿದ್ದು, ಲಘು ವಾಹನ ಸಂಚಾರಕ್ಕೆ ಅವಕಾಶ ಮಾಡಲಾಗಿದೆ. ಕಳೆದ ೨೪ ಗಂಟೆ ಅವಧಿಯಲ್ಲಿ ಸಂಪಾಜೆ ಮತ್ತು ಕರಿಕೆ ಭಾಗದಲ್ಲಿ ಹೆಚ್ಚಿನ ಮಳೆಯಾಗಿತ್ತು. ಕೊಯನಾಡು ಬಳಿ ೫ ಮನೆ ಮತ್ತು ಸಂಪಾಜೆ ಬಳಿ ೨ ಮನೆಗಳಿಗೆ ಹಾನಿಯಾಗಿದೆ. ೧೨ ಕಡೆ ಮಣ್ಣು ಕುಸಿತ ಉಂಟಾಗಿದೆ. ಸದ್ಯ ಮನೆ ಹಾನಿಯಾಗಿರುವುದಕ್ಕೆ ತಲಾ ೧೦ ಸಾವಿರ ರೂ. ಪರಿಹಾರ ವಿತರಿಸಲಾಗಿದೆ ಎಂದರು.


ಸದ್ಯ ಕಾಳಜಿ ಕೇಂದ್ರದಲ್ಲಿ ೫ ಕುಟುಂಬದ ೨೧ ಜನರು ಇದ್ದಾರೆ. ಸಂಬಂಧಿಕರ ಮನೆಯಲ್ಲಿರುವವರಿಗೂ ಸಹ ಆಹಾರ ಕಿಟ್ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.


ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಆಯೋಗದ ಆಯುಕ್ತ ಡಾ.ಮನೋಜ್ ರಾಜನ್ ಮಾಹಿತಿ ನೀಡಿ, ಮುಂದಿನ ಒಂದು ವಾರಗಳ ಕಾಲ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಭೂಕುಸಿತ ಪ್ರದೇಶಗಳಲ್ಲಿನ ಜನರಿಗೆ ಮಾಹಿತಿ ನೀಡಿ, ಸ್ಥಳಾಂತರಿಸಬೇಕು. ಸಹಾಯವಾಣಿ ಕೇಂದ್ರಗಳು ಸಂಪರ್ಕದಲ್ಲಿರಬೇಕು. ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಹಾಗೂ ಅಧಿಕಾರಿಗಳ ತಂಡಗಳು ಎಚ್ಚರ ಇರಬೇಕು ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಲೋಕೋಪಯೋಗಿ ಇಲಾಖೆ ಇಇ ನಾಗರಾಜು, ತಹಶೀಲ್ದಾರ್ ಪಿ.ಎಸ್.ಮಹೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾರಾಯಣ ರೆಡ್ಡಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣತರಾದ ಅನನ್ಯ ವಾಸುದೇವು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net